Tumkurnews
ತುಮಕೂರು; ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಸರ್ಕಾರದಿಂದ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ವರಿಗೂ ಸೂರು ನೀಡಬೇಕೆಂಬ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರಗತಿ ಸಾಧಿಸಬೇಕು. ಈ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಈ ವಸತಿ ಯೋಜನೆಗಳಡಿ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣಪಂಚಾಯತಿ ವ್ಯಾಪ್ತಿಯ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಸಾಮಾನ್ಯ ವರ್ಗದವರಿಗೆ 1.20 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 2ಲಕ್ಷ ರೂ.ಗಳ ನೆರವು ನೀಡಲಾಗುವುದು ಎಂದು ತಿಳಿಸಿದರು.
ವಸತಿ ಯೋಜನೆಯಡಿ ಫಲಾನುಭವಿ ಆಯ್ಕೆಯಲ್ಲಿ ಲೋಪವಾಗಬಾರದು. ಒಮ್ಮೆ ಆಯ್ಕೆ ಮಾಡಿದ ಫಲಾನುಭವಿಯನ್ನು ಮತ್ತೊಮ್ಮೆ ಆಯ್ಕೆ ಮಾಡಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ. ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಸೀಲ್ದಾರ್ ಮೋಹನ್ ಕುಮಾರ್, ಭೂ ದಾಖಲೆಗಳ ಉಪನಿರ್ದೇಶಕ ಸುಜಯ್, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.
+ There are no comments
Add yours