Tumkurnews
ತುಮಕೂರು; ನಗರದ ಗಾಜಿನ ಮನೆ ಆವರಣದಲ್ಲಿ ಡಿ.15 ಮತ್ತು 16ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಸಮ್ಮೇಳನ ನಡೆಯುತ್ತದೆ. ಸಾಹಿತಿ ಎಂ.ವಿ. ನಾಗರಾಜರಾವ್ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಉಪವಿಭಾಗಾಧಿಕಾರಿ ಅಜಯ್ ಡಿ.15ರಂದು ಬೆಳಿಗ್ಗೆ 7.30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆ.8.30ಕ್ಕೆ ಸಮ್ಮೇಳನಾಧ್ಯಕ್ಷರನ್ನು ವೇದಿಕೆಗೆ ಬರಮಾಡಿಕೊಳ್ಳಲಾಗುವುದು. ಸಾಹಿತಿ ಡಾ. ಹಂ.ಪ ನಾಗರಾಜಯ್ಯ ಉದ್ಘಾಟನಾ ಸಮಾರಂಭವನ್ನು ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಟಿ.ಎಸ್ ನಾಗಾಭರಣ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಪ್ರಮುಖ ವೇದಿಕೆಗೆ ಡಾ. ಶ್ರೀ ಶ್ರೀ ಶಿವಕುಮಾರ ಮಹಾ ಸ್ವಾಮೀಜಿ ಹೆಸರಿಡಲಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಎಂ.ವಿ ನಾಗರಾಜರಾವ್ ಮಾತನಾಡಲಿದ್ದಾರೆ. ಮಧ್ಯಾಹ್ನ 12:45ಕ್ಕೆ ‘ತುಮಕೂರು ಜಿಲ್ಲೆ ಅಭಿವೃದ್ಧಿ ಆಯಾಮಗಳು’ ಸಂವಾದ ಗೋಷ್ಠಿ ಕಾರ್ಯಕ್ರಮ ನಡೆಯಲಿದ್ದು, ರಾಜ್ಯ ದಿಶಾ ಸಮಿತಿ ಹಾಗೂ ಜಿಲ್ಲಾ ವಿದ್ಯುಚ್ಚಕ್ತಿ ಸಮಿತಿ ಸದಸ್ಯ ಕುಂದರನಹಳ್ಳಿ ರಮೇಶ ಅಧ್ಯಕ್ಷತೆ ವಹಿಸಲಿದ್ದಾರೆ.
‘ಇಂಗ್ಲೀಷ್ ಕಲಿತರೆ ಮಾತ್ರ ಹೊಟ್ಟೆಪಾಡು’; ಕನ್ನಡಿಗರು ಭ್ರಮೆಯಿಂದ ಹೊರ ಬರಲಿ ಎಂದ ಮನು ಬಳಿಗಾರ್
ಡಿಸೆಂಬರ್ 16ರ ಬೆಳಗ್ಗೆ 11:45 ರಿಂದ 01 ಗಂಟೆವರೆಗೆ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಳಿಕ ಬಹಿರಂಗ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಸದ ಜಿ.ಎಸ್ ಬಸವರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ನಾಡಿನ ಪ್ರಮುಖ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಾಡೋಜ ಡಾ.ಮಹೇಶ್ ಜೋಷಿ ಸಾಧಕರನ್ನು ಗೌರವಿಸಲಿದ್ದಾರೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು.
+ There are no comments
Add yours