ಪಬ್, ಬಾರ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳಲ್ಲಿ ಮಾಸ್ಕ್ ಧರಿಸಲು ಡಿಸಿ ಮನವಿ
Tumkurnews
ತುಮಕೂರು; ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ನಿಯಮ, ನಿರ್ದೇಶನಗಳನ್ನು ಜಾರಿಗೊಳಿಸಿದ್ದು, ಸಾರ್ವಜನಿಕರು ಹಾಗೂ ಸಭೆ, ಸಮಾರಂಭ ಆಯೋಜಕರು ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮನವಿ ಮಾಡಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ಪರಿಸ್ಥಿತಿಯು ನಿಯಂತ್ರಣದಲ್ಲಿದ್ದು, ಅದಾಗ್ಯೂ ಕೋವಿಡ್-19 ಮುನ್ನೆಚ್ಚರಿಕೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸಾಧಿಸಲಾಗಿರುವ ಉತ್ತಮ ಅಂಶಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಕೋವಿಡ್-19 ಸಲಹಾ ಪತ್ರವನ್ನು ಬಿಡುಗಡೆ ಮಾಡಿದ್ದು, ಅದರನ್ವಯ ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಪಬ್, ಬಾರ್, ರೆಸ್ಟೋರೆಂಟ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಕಚೇರಿಗಳು ಸೇರಿದಂತೆ ಬಸ್, ರೈಲು, ಮೆಟ್ರೋ, ವಿಮಾನಯಾನ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿರುತ್ತದೆ. ಅದರಲ್ಲೂ ವೃದ್ಧರು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಅರ್ಹರೆಲ್ಲರೂ ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕಾ ಡೋಸ್ ಅನ್ನು ಶೀಘ್ರವಾಗಿ ಪಡೆದುಕೊಳ್ಳಬೇಕು. ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಮಧ್ಯಮ ಪ್ರಮಾಣದ ವ್ಯಾಯಾಮ ಮತ್ತು ಉಸಿರಾಟದ ವ್ಯಾಯಾಮಗಳು ಹಾಗೂ ಧ್ಯಾನಗಳನ್ನು ಮಾಡಬೇಕಾಗುತ್ತದೆ. ಉಸಿರಾಟದ ಸಮಸ್ಯೆ ಹಾಗೂ ಕೋವಿಡ್-19 ಸೋಂಕಿನ ಲಕ್ಷಣಗಳನ್ನು ಹೊಂದಿರುವವರು, ಸ್ವಯಂ ಪ್ರತ್ಯೇಕವಾಗಿದ್ದು, ಪರೀಕ್ಷೆ ಮಾಡಿಸಿಕೊಳ್ಳಬೇಕು ಹಾಗೂ ಫಲಿತಾಂಶದ ಆಧಾರದ ಮೇಲೆ ಚಾಲ್ತಿಯಲ್ಲಿರುವ ಪ್ರಮಾಣೀಕೃತ ಶಿಷ್ಟಾಚಾರದ ಅನ್ವಯ ಕ್ರಮಗಳನ್ನು ಪಾಲಿಸುವುದು ಎಂದು ಅವರು ತಿಳಿಸಿದ್ದಾರೆ.
ಸಭೆ, ಸಮಾರಂಭಗಳ ಆಯೋಜಕರು, ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಮತ್ತು ಒಳ್ಳೆಯ ಗಾಳಿ, ಬೆಳಕು ಇರುವ ಸ್ಥಳಗಳಲ್ಲಿ ಹಗಲು ಹೊತ್ತಿನಲ್ಲಿ ನಡೆಸುವುದರಿಂದ ಆರೋಗ್ಯದ ಮೇಲೆ ಮುಂಜಾನೆ ಹಾಗೂ ಸಂಜೆಯ ಶೀತ, ಗಾಳಿಯ ಪರಿಣಾಮವನ್ನು ತಡೆಗಟ್ಟಬಹುದಾಗಿದೆ.
ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದ್ದು, ದೈಹಿಕ ಅಂತರವನ್ನು ಪಾಲಿಸುವುದು ಅಗತ್ಯವಾಗಿದೆ. ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ರಾಜ್ಯ, ಜಿಲ್ಲೆಗಳ ಆರೋಗ್ಯ ಪ್ರಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ. ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವುದು ಅತ್ಯಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಸಾರ್ವಜನಿಕರು ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ.
+ There are no comments
Add yours