ತುಮಕೂರು; ಎಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರ‌ಮ

1 min read

Tumkurnews
ತುಮಕೂರು; ಕಲ್ಪತರು ನಾಡಿನಲ್ಲಿ ವೈಕುಂಠ ಏಕಾದಶಿಯನ್ನು ಸಡಗರ ಸಂಭ್ರಮದೊಂದಿಗೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ವಿವಿಧ ಬಡಾವಣೆಗಳಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಅಂಗವಾಗಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಇಲ್ಲಿನ ಬಟವಾಡಿಯ ವೆಂಕಟೇಶ್ವರ ಸ್ವಾಮಿ ದೇವಾಲಯ, ಜಯನಗರ ರಿಂಗ್ ರಸ್ತೆಯ ತಿರುಮಲ ನಗರ ದಕ್ಷಿಣದ ಕೆ.ಎಚ್.ಬಿ ಕಾಲೋನಿಯಲ್ಲಿರುವ ತಿರುಮಲ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ, ಸರಸ್ವತಿ ಪುರಂನ ವೆಂಕಟೇಶ್ವರ ಸ್ವಾಮಿ ದೇಗುಲ, ಜಯನಗರದ ಪದ್ಮಾವತಿ ವೆಂಕಟೇಶ್ವರಸ್ವಾಮಿ ದೇವಾಲಯ, ಟಿಜಿಎಂಸಿ ಬ್ಯಾಂಕ್ ಮುಂಭಾಗದ ಮಹಾಲಕ್ಷ್ಮಿ ದೇವಾಲಯ, ಸಿರಾಗೇಟ್‍ನ ದೇವಾಲಯ, ಸೋಮೇಶ್ವರ ಪುರಂನ ಗೋಪಾಲಕೃಷ್ಣ ದೇವಾಲಯ, ಶಾಂತಿನಗರದ ಲಕ್ಷ್ಮೀವೆಂಕಟೇಶ್ವರಸ್ವಾಮಿ ದೇವಾಲಯ, ತುರುವೇಕೆರೆ ತಾಲ್ಲೂಕಿನ ಮುದುಗೆರೆ ಸಮೀಪದ ಶ್ರೀ ಕೋಡಿ ರಂಗನಾಥಸ್ವಾಮಿ ದೇವಾಲಯ, ಸಂಪಿಗೆಯ ವೆಂಕಟೇಶ್ವರ ಸ್ವಾಮಿ ದೇವಾಲಯ ಹಾಗೂ ಗುಬ್ಬಿಯ ಬೇಟೆರಾಯಸ್ವಾಮಿ ದೇವಾಲಯ, ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಇಂದು ಮುಂಜಾನೆಯಿಂದಲೇ ಭಕ್ತಾದಿಗಳು ವೆಂಕಟೇಶ್ವರ ಸ್ವಾಮಿ ದೇವಾಲಯಗಳಿಗೆ ತೆರಳಿ ವೈಕುಂಠ ದರ್ಶನದೊಂದಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ವೈಕುಂಠ ಏಕಾದಶಿ ಅಂಗವಾಗಿ ಮುಂಜಾನೆಯಿಂದಲೇ ದೇವಾಲಯಗಳಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ಉಯ್ಯಾಲೆ ಸೇವೆ, ಪ್ರಕಾರೋತ್ಸವಗಳು ಜರುಗಿದವು.
ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ಹಾಗೆಯೇ ದೇವರ ಮೂರ್ತಿಗಳಿಗೂ ವೈಭವೋಪೇತ ಅಲಂಕಾರ ಮಾಡಲಾಗಿತ್ತು. ಭಕ್ತರ ದರ್ಶನಕ್ಕಾಗಿ ಯಾವುದೇ ರೀತಿಯ ತೊಂದರೆಗಳಾಗದಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿತ್ತು.
ಭಕ್ತಾದಿಗಳು ಸಹ ಮುಂಜಾನೆಯಿಂದಲೇ ದೇವಾಲಯಗಳಿಗೆ ತೆರಳಿ ಸರದಿಯ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
ಈ ಎಲ್ಲ ದೇವಾಲಯಗಳಲ್ಲೂ ಭಕ್ತಾದಿಗಳಿಗೆ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ವೆಂಕಟೇಶ್ವರನ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಗೋವಿಂದನ ನಾಮಸ್ಮರಣೆ ಮೊಳಗಿದವು.
ನಗರದ ವಿವಿಧ ಬಡಾವಣೆಗಳಲ್ಲಿರುವ ವೆಂಕಟೇಶ್ವರಸ್ವಾಮಿ ದೇವಾಲಯಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾದಿಗಳು ನೆರವೇರಿದ್ದು, ಭಕ್ತರಿಗೆ ವೈಕುಂಠ ಏಕಾದಶಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

About The Author

You May Also Like

More From Author

+ There are no comments

Add yours