ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು; ಅಧಿಕಾರಿಗಳಿಗೆ ಡಿಸಿ ಸೂಚನೆ

1 min read

 

Tumkurnews
ತುಮಕೂರು; ಚುನಾವಣಾ ಕರ್ತವ್ಯಕ್ಕೆ ನೇಮಕ ಮಾಡಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಾವುದೇ ನೆಪ ಹೇಳಿ ಗೈರು ಹಾಜರಾಗದೆ, ಕಡ್ಡಾಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಫ್ಲೈಯಿಂಗ್ ಸ್ಕ್ವಾಡ್, ವಿಡಿಯೋ ವೀಕ್ಷಣಾ ತಂಡ, ಸ್ಟ್ಯಾಟಿಕ್ ತಂಡ, ಚುನಾವಣಾ ವೆಚ್ಚದ ತಂಡ, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ವಿವಿಧ ಹಂತದ ಅಧಿಕಾರಿಗಳಿಗಾಗಿ ಸೋಮವಾರ ಏರ್ಪಡಿಸಿದ್ದ ‘ಚುನಾವಣಾ ತರಬೇತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ 11 ವಿಧಾನಸಭಾ ಕ್ಷೇತ್ರಗಳ ಪೈಕಿ 2683 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಲ್ಲಿಯೂ ಶಾಂತಿಯುತ ಮತದಾನ ಜರುಗುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದಲ್ಲಿ ಕರ್ತವ್ಯ ನಿರ್ವಹಿಸಬೇಕು. ಚುನಾವಣಾ ಅಕ್ರಮಗಳು ಕಂಡು ಬಂದಾಗ ವಾಸ್ತವಾಂಶ ಅರಿತು ಯಾರಿಗೂ ಹೆದರದೆ ಪ್ರಕರಣಗಳನ್ನು ದಾಖಲಿಸಬೇಕು. ಯಾರ ಪರವಾಗಿಯೂ, ವಿರೋಧವಾಗಿಯೂ ಕೆಲಸ ಮಾಡದೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೆಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಶಹಪೂರವಾಡ್ ಮಾತನಾಡಿ, ಜಿಲ್ಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಚುನಾವಣೆ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರಲ್ಲದೆ, ಜಿಲ್ಲೆಯು ಉತ್ತಮ ಚುನಾವಣಾ ತಂಡವನ್ನು ಹೊಂದಿದ್ದು, ಅಧಿಕಾರಿಗಳು ಸಮನ್ವಯತೆ ಹಾಗೂ ಜಾಗರೂಕತೆಯಿಂದ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು. ಜಿಲ್ಲಾ ಚುನಾವಣಾಧಿಕಾರಿಗಳ ನಿರ್ದೇಶನಗಳನ್ನು ತಪ್ಪದೇ ಪಾಲಿಸಬೇಕು ಎಂದು ತಿಳಿಸಿದರು.
ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದೇ ಪಕ್ಷದ ಅಭ್ಯರ್ಥಿಗಳು ಮತದಾರರಿಗೆ ಹಣ, ಮದ್ಯ, ಆಮಿಷಗಳನ್ನು ಒಡ್ಡುವುದು ಸೇರಿದಂತೆ ಚುನಾವಣಾ ಅಕ್ರಮಗಳು ಕಂಡು ಬಂದಲ್ಲಿ ವಿಡಿಯೋ ಚಿತ್ರೀಕರಿಸಿ ಪೊಲೀಸ್ ಇಲಾಖೆಗೆ ಪ್ರಕರಣ ದಾಖಲಿಸಲು ಅಧಿಕಾರಿಗಳು ಮಾಹಿತಿ ಒದಗಿಸಬೇಕು. ಚುನಾವಣಾ ಅಕ್ರಮಗಳ ಬಗ್ಗೆ ಪ್ರಕರಣ ದಾಖಲಿಸುವಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಂದ ಅಡ್ಡಿಯುಂಟಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಚುನಾವಣೆ ಸಂದರ್ಭದಲ್ಲಿ ಇಲಾಖೆಯ ಯಾವುದೇ ಸಿಬ್ಬಂದಿಗಳು ರಾಜಕೀಯ ಮಾಡದೆ ಕರ್ತವ್ಯ ನಿರ್ವಹಿಸಬೇಕು. ಪೊಲೀಸ್ ಸಿಬ್ಬಂದಿ ಚುನಾವಣೆ ಆರಂಭದಿಂದ ಅಂತ್ಯಗೊಳ್ಳುವವರೆಗೆ ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಸೂಚಿಸಿದರಲ್ಲದೆ, ಶಾಂತಿಯುತ ಚುನಾವಣೆ ಜರುಗುವಲ್ಲಿ ಪೊಲೀಸರ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ ವಿದ್ಯಾಕುಮಾರಿ ಮಾತನಾಡಿ, ಮಾರ್ಚ್ ಮಾಹೆಯ ಯಾವುದೇ ದಿನಾಂಕದಂದು ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, ಇದಕ್ಕಾಗಿ ಚುನಾವಣಾ ಆಯೋಗವು 2 ತಿಂಗಳ ಹಿಂದಿನಿಂದಲೇ ಪೂರ್ವ ಸಿದ್ಧತೆಯನ್ನು ಕೈಗೊಂಡಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ತಂಡಗಳ ಜವಾಬ್ದಾರಿಗಳನ್ನು ತಿಳಿಸಿದ ಅವರು, ಎಲ್ಲಾ ತಂಡಗಳು ಚುನಾವಣಾ ಕಾನೂನುಗಳ ಬಗ್ಗೆ ತಿಳಿದುಕೊಳ್ಳಬೇಕು. ತಮ್ಮ ಜವಾಬ್ದಾರಿಗಳನ್ನು ಅರಿತು ಕಾಲಕಾಲಕ್ಕೆ ಬದಲಾಗುವ ನಿಯಮ, ಸುತ್ತೋಲೆಗಳ ಬಗ್ಗೆ ಗಮನ ಇರಬೇಕು ಎಂದರಲ್ಲದೆ, ಅಧಿಕಾರಿಗಳು ಯಾವುದೇ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬಾರದೆಂದು ಕಿವಿಮಾತು ಹೇಳಿದರು.
ಚುನಾವಣೆಯು ಪ್ರಜಾಪ್ರಭುತ್ವದ ಅಡಿಗಲ್ಲು. ಭವಿಷ್ಯದಲ್ಲಿ ಮಕ್ಕಳಿಗೆ ಉತ್ತಮ ಸಾಮಾಜಿಕ ವಾತಾವರಣ ಕಲ್ಪಿಸಲು ನಿಷ್ಪಕ್ಷಪಾತ ಚುನಾವಣೆ ಅಗತ್ಯ ಎಂದು ತಿಳಿಸಿದರಲ್ಲದೆ, ಕೋಲಾರ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುವಾಗ ಚುನಾವಣಾ ಕರ್ತವ್ಯ ನಿರ್ವಹಿಸಿದ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಾ, ಚುನಾವಣೆ ಸಂದರ್ಭದಲ್ಲಿ ಸಾಮಾನ್ಯವಾಗಿ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಚಿತ್ರಣ ನೀಡಿದರು.
ಚುನಾವಣಾ ಸಂದರ್ಭದಲ್ಲಿ ವಾಹನ ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಚುನಾವಣಾ ವಿಷಯಗಳನ್ನು ಗೌಪ್ಯವಾಗಿಡಬೇಕು. ಸರ್ಕಾರಿ ನೌಕರರು ಯಾವುದೇ ರಾಜಕೀಯ ಅಭ್ಯರ್ಥಿಗಳ ಪರವಾಗಿ ಮಾತನಾಡುವುದಾಗಲಿ ಅಥವಾ ಪಕ್ಷದ ನಾಯಕರ ಜೊತೆಗೆ ಗುರುತಿಸಿಕೊಳ್ಳುವುದಾಗಲಿ ಮಾಡಬಾರದು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಮಾತನಾಡಿ, ಇವಿಎಂ ಯಂತ್ರ ಬಳಸುವ ವಿಧಾನದ ಬಗ್ಗೆ ಅಧಿಕಾರಿಗಳು ತಿಳಿದುಕೊಂಡಿರಬೇಕು ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ ಗೋಪಾಲ್, ರಿಜ್ವಾನ್ ಪಾಷ, ವೇದಮೂರ್ತಿ, ಹೆಚ್.ಬಿ ಗಂಗಾಧರ್ ಅವರು ಅಧಿಕಾರಿಗಳಿಗೆ ಚುನಾವಣಾ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿಗಳಾದ ಕಲ್ಪಶ್ರೀ, ರಿಷಿ ಆನಂದ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮರಿಯಪ್ಪ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಅತೀಕ್, ಎಸ್.ಎಸ್.ಟಿ. ತಂಡ, ಎಫ್.ಎಸ್.ಟಿ. ತಂಡ, ಸೆಕ್ಟರ್ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿ ಸರ್ಕಾರದ ಸಾಧನೆಗಳೇನು?; ಪ್ರೋಗ್ರೆಸ್ ಕಾರ್ಡ್ ಮಂಡಿಸಿದ ಸಿಎಂ ಬೊಮ್ಮಾಯಿ

About The Author

You May Also Like

More From Author

+ There are no comments

Add yours