ತುಮಕೂರು; ಜಿಲ್ಲೆಯಾದ್ಯಂತ ನಿಷೇದಾಜ್ಞೆ ಜಾರಿ
Tumkurnews 
ತುಮಕೂರು: ಜಿಲ್ಲೆಯಾದ್ಯಂತ 13 ಪರೀಕ್ಷಾ ಕೇಂದ್ರಗಳಲ್ಲಿ ಮೇ 23 ರಿಂದ ಜೂನ್ 3ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಗಳನ್ನು ಲೋಪದೋಷವಿಲ್ಲದಂತೆ ನಡೆಸಲು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಈ ನಿಷೇಧಾಜ್ಞೆಯು ಮೇ 23 ರಿಂದ ಜೂನ್ 3(ಸರ್ಕಾರಿ ರಜೆ ಮತ್ತು ಪರೀಕ್ಷೆ ನಡೆಯದೆ ಇರುವ ದಿನಗಳನ್ನು ಹೊರತುಪಡಿಸಿ)ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕು. ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವ ಅನಧಿಕೃತ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆ್ಯಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷೆಯ ಮುಖ್ಯಾಧಿಕ್ಷರಿಗೆ ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಮಾತ್ರ ಅವಕಾಶವಿದ್ದು, ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ, ವಿದ್ಯಾರ್ಥಿಗಳು ಮೊಬೈಲ್ ತರುವುದು, ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಎಂದು ಕಂಡು ಬಂದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 107 ಮತ್ತು 110ರ ಅಡಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಆದೇಶಿಸಿದ್ದಾರೆ.
                                            
                                            
                                            
                                            
                                            
                                            
                                            
                                            
                                            
                                    
                                    
                                    
                                    


                                    
                                    
                                    
+ There are no comments
Add yours