ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಜುಲೈ 8ರಂದು ರಾಷ್ಟ್ರೀಯ ಲೋಕ ಅದಾಲತ್

Tumkurnews
ತುಮಕೂರು; ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 8ರಂದು “ರಾಷ್ಟ್ರೀಯ ಜನತಾ ನ್ಯಾಯಾಲಯ”ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 89,447 ಪ್ರಕರಣಗಳಲ್ಲಿ 16,188 ಪ್ರಕರಣಗಳು ಹಾಗೂ ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿ ಒಟ್ಟು 1,55,144 ಪ್ರಕರಣಗಳನ್ನು ಇತ್ಯರ್ಥಪಡಿಸುವ ಮೂಲಕ ಕರ್ನಾಟಕ ರಾಜ್ಯವು ಹಿಂದಿನ ಲೋಕ್ ಅದಾಲತ್‍ಗಳಲ್ಲಿ ಹೆಚ್ಚಿನ ಪ್ರಕರಣಗಳನ್ನು ವಿಲೇವಾರಿ ಮಾಡಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ.
ಲೋಕ್ ಅದಾಲತ್, ಜನತಾ ನ್ಯಾಯಾಲಯದ ಮೂಲ ಆಶಯವೆಂದರೆ, ಪಕ್ಷಗಾರರು ರಾಜಿ ಅಥವಾ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥ ಪಡಿಸಿಕೊಳ್ಳಬಹುದು ಇದರಿಂದ ಪಕ್ಷಗಾರರ ಮಧ್ಯೆ ಇರುವ ವೈಮನಸ್ಸು ಕಡಿಮೆಯಾಗಿ ಸೌಹಾರ್ದತೆ ಹೆಚ್ಚಾಗುತ್ತದೆ. ಇದರಿಂದ ನ್ಯಾಯಾಲಯದ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ನ್ಯಾಯಾಧೀಶರು ಹೆಚ್ಚು ಅವಶ್ಯಕತೆ, ಕಾನೂನಿನ ಸಂಕೀರ್ಣತೆ ಇರುವಂತಹ ಪ್ರಕರಣಗಳಿಗೆ ಹೆಚ್ಚು ಒತ್ತು ಕೊಟ್ಟು ನ್ಯಾಯಾಲಯಗಳಲ್ಲಿ ಚಾಲ್ತಿ ಇರುವಂತಹ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಜುಲೈ 8ರಂದು ರಾಷ್ಟ್ರೀಯ ಜನತಾ ನ್ಯಾಯಾಲಯವನ್ನು ಏರ್ಪಡಿಸಲಾಗಿದ್ದು, ಜನಸಾಮಾನ್ಯರಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ.
ಸದರಿ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕಾರ್ಮಿಕ ವಿವಾದ, ವಿದ್ಯುತ್, ನೀರಿನ ಶುಲ್ಕ ಹಾಗೂ ರಾಜೀಯಾಗಬಲ್ಲ ಅಪರಾಧಿಕ, ವೈವಾಹಿಕ ಹಾಗೂ ಸಿವಿಲ್ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ವೈವಾಹಿಕ, ಕುಟುಂಬ ನ್ಯಾಯಾಲಯದ (ವಿಚ್ಚೇದನೆಯನ್ನು ಹೊರತುಪಡಿಸಿ), ಮೋಟಾರು ಅಪಘಾತ ಪರಿಹಾರ ಪ್ರಕರಣ, ಭೂಸ್ವಾದೀನ ಪ್ರಕರಣ, ರಾಜೀಯಾಗಬಲ್ಲ ಸಿವಿಲ್ ಪ್ರಕರಣ ಹಾಗೂ ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಲೋಕ್ ಅದಾಲತ್ ಪ್ರಯೋಜನಗಳೆಂದರೆ ನಿಮ್ಮ ಕೇಸನ್ನು ಜನತಾ ನ್ಯಾಯಾಲಯದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ನೀವೇ ನೇರವಾಗಿ ಅಥವಾ ವಕೀಲರ ಮುಖಾಂತರ ಭಾಗವಹಿಸಬಹುದು. ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ಸುಖಾಂತ್ಯಗೊಳ್ಳುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು (ವ್ಯಾಜ್ಯಪೂರ್ವ ಪ್ರಕರಣಗಳು) ಸಹಾ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ಒಪ್ಪಿಗೆಯಾದಲ್ಲಿ ಮಾತ್ರ ನೀವು ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇಂದೊಂದು ವಿಶೇಷ ಅವಕಾಶವಾಗಿದೆ. ಜನತಾ ನ್ಯಾಯಾಲಯದಲ್ಲಿ ಆಗುವ ತೀರ್ಮಾನವೇ ಅಂತಿಮ, ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ ಕೇವಲ ಮೋಸದಂತಹ ತುಂಬಾ ಅಪರೂಪದ ಪ್ರಕರಣಗಳಲ್ಲಿ ಮಾತ್ರ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
ಜುಲೈ 8ರಂದು ನಡೆಯುವ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಪ್ರತೀದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ನಡೆಯುತ್ತಲಿವೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರ ಕಚೇರಿ ದೂರವಾಣಿ ಸಂಖ್ಯೆ 0816-2255133, 9141193959ನ್ನು ಸಂಪರ್ಕಿಸಿ ಖುದ್ದು ಹಾಜರಾಗುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

About The Author

You May Also Like

More From Author

+ There are no comments

Add yours