ಆ. 21 ರಿಂದ ದ್ವಿತೀಯ ಪಿಯುಸಿ ಪೂರಕ-2 ಪರೀಕ್ಷೆ: ಪರೀಕ್ಷಾ ಅಕ್ರಮಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
Tumkurnews
ತುಮಕೂರು: ಜಿಲ್ಲೆಯಲ್ಲಿ ಆಗಸ್ಟ್ 21ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ-2 ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಪರೀಕ್ಷಾ ಶಿಷ್ಠಾಚಾರವನ್ನು ಕಾಯ್ದುಕೊಂಡು ನಿಯಮಾನುಸಾರ ಯಶಸ್ವಿಯಾಗಿ ನಡೆಸಬೇಕು. ಪರೀಕ್ಷೆ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಪರೀಕ್ಷಾ ಅಕ್ರಮಗಳಿಗೆ ಆಸ್ಪದ ನೀಡದಂತೆ ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ಜಿಲ್ಲಾ ಖಜಾನೆ ಹಾಗೂ ಮಧುಗಿರಿ ತಾಲ್ಲೂಕು ಖಜಾನೆಗಳಿಂದ ಗೌಪ್ಯ ವಸ್ತುಗಳನ್ನು ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ತಲುಪಿಸಲು ಮಾರ್ಗಾಧಿಕಾರಿಗಳ ತಂಡಗಳನ್ನು ರಚಿಸಬೇಕು. ಮಾರ್ಗಾಧಿಕಾರಿಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡತಕ್ಕದ್ದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ಅವರಿಗೆ ಸೂಚನೆ ನೀಡಿದರು.
ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳನ್ನು ಸಾಗಾಣಿಕೆ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಉಪಕರಣ ಅಳವಡಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು. ವಿದ್ಯಾರ್ಥಿರ್ಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೊಠಡಿಗೆ ಸಾಕಷ್ಟು ಗಾಳಿ, ಬೆಳಕು ಇರುವಂತೆ ಹಾಗೂ ಉತ್ತಮ ಪೀಠೋಪಕರಣಗಳ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲಾ ಖಜಾನೆ ಹಾಗೂ ಮಧುಗಿರಿ ತಾಲ್ಲೂಕು ಖಜಾನೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಬಯೋಮೆಟ್ರಿಕ್ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್, ಟೈಪಿಂಗ್, ಇಂಟರ್ನೆಟ್, ಸೈಬರ್ ಸೆಂಟರ್ ಗಳನ್ನು ಮುಚ್ಚಿಸುವಂತೆ ಕ್ರಮಕೈಗೊಳ್ಳಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ಮಾತನಾಡಿ, ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 4 ಹಾಗೂ ಉಳಿದ 9 ತಾಲ್ಲೂಕುಗಳಲ್ಲಿ ತಲಾ 1 ಸೇರಿದಂತೆ ಒಟ್ಟು 13 ಕೇಂದ್ರಗಳಲ್ಲಿ ಆಗಸ್ಟ್ 21 ರಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷೆಗೆ 4499 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಮಂಡಳಿಯ ವೇಳಾಪಟ್ಟಿಯನ್ವಯ ಆಗಸ್ಟ್ 21ರಂದು ಕನ್ನಡ, ಅರೇಬಿಕ್, 22ರಂದು ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಬೇಸಿಕ್ ಮ್ಯಾಥ್ಸ್, 23ರಂದು ಸೋಷಿಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, 24ರಂದು ಲಾಜಿಕ್, ಹಿಂದೂಸ್ತಾನಿ ಮ್ಯೂಜಿಕ್, ಬಿಸಿನೆಸ್ ಸ್ಟಡೀಸ್, 25ರಂದು ಇತಿಹಾಸ, ಸ್ಟ್ಯಾಟಿಸ್ಟಿಕ್ಸ್, 26ರಂದು ಇಂಗ್ಲೀಷ್, 28ರಂದು ಜಿಯೋಗ್ರಫಿ, ಸೈಕಾಲಜಿ, ಭೌತಶಾಸ್ತ್ರ, 29ರಂದು ಅಕೌಂಟೆನ್ಸಿ, ಜಿಯಾಲಜಿ, ಎಜುಕೇಷನ್, ಹೋಂಸೆನ್ಸ್, 30ರಂದು ಪೊಲಿಟಿಕಲ್ ಸೈನ್ಸ್, ಮ್ಯಾಥಮೆಟಿಕ್ಸ್, 31ರಂದು ಹಿಂದಿ, ಸೆ.1ರಂದು ಎಕನಾಮಿಕ್ಸ್, ಬಯೋಲಜಿ, ಸೆ.2ರಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಪ್ರೆಂಚ್ ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಗಳು ಮಧ್ಯಾಹ್ನ 2.15 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ನಡೆಯಲಿವೆ. ಅದೇ ರೀತಿ ಆಗಸ್ಟ್ 26ರಂದು ಬೆಳಿಗ್ಗೆ 10-15 ಗಂಟೆಯಿಂದ 12-30 ಗಂಟೆಯವರೆಗೆ ಇನ್‍ಫಾರ್‍ಮೇಷನ್ ಟೆಕ್ನಾಲಜಿ, ರಿಟೇಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್ ಪರೀಕ್ಷೆಗಳು ನಡೆಯಲಿವೆ ಎಂದು ವೇಳಾ ಪಟ್ಟಿಯ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್, ವಿವಿಧ ಸರ್ಕಾರಿ ಕಾಲೇಜುಗಳ ಪ್ರಾಂಶುಪಾಲರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
+ There are no comments
Add yours