ಸುಳ್ಳು ಸುದ್ದಿ, ವದಂತಿ ಹಬ್ಬಿಸಿದರೆ ಸ್ವಯಂಪ್ರೇರಿತ ಎಫ್ಐಆರ್, ಪೊಲೀಸರ ವಿರುದ್ಧವೂ ಕ್ರಮ: ಗುಡುಗಿದ ಸಿದ್ದರಾಮಯ್ಯ
ಬೆಂಗಳೂರು: ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎಂದು ಪೊಲೀಸರಿಗೆ ಸೂಚನೆ ನೀಡಿದರು.
ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ.
ನಮ್ಮ ಸರ್ಕಾರ ಕೇವಲ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದರು.
ಸಿಸಿಬಿ ಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು.
ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಗೃಹ ಸಚಿವ ಡಾ.ಜಿ ಪರಮೇಶ್ವರ್ ಇದ್ದರು.
+ There are no comments
Add yours