ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇಲ್ಲಿದೆ ಮಾಹಿತಿ

1 min read

 

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ 6 ಕಡೆಯ ದಿನ

Tumkurnews
ತುಮಕೂರು: ಕರ್ನಾಟಕ ವಿಧಾನ ಪರಿಷತ್ತಿನ ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮೇ 6 ಕಡೆಯ ದಿನವಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಪಾಲ್ಗೊಂಡ ನಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ಈ ಕುರಿತು ಮಾಹಿತಿ ನೀಡಿದರು.
ಅರ್ಹತೆಗಳೇನು?:
ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ 2023ರ ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು  ಪ್ರಕಟಿಸಲಾಗಿದೆ.

* ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಿಚ್ಛಿಸುವ ಶಿಕ್ಷಕ ಮತದಾರರು ಭಾರತದ ಪ್ರಜೆಯಾಗಿರಬೇಜು.

* ಆಗ್ನೇಯ ಶಿಕ್ಷಕರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರಬೇಕು.

* 2023ರ ನವೆಂಬರ್ 1ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಕನಿಷ್ಠ ಒಟ್ಟು 3 ವರ್ಷಗಳಷ್ಟು ಪ್ರೌಢಶಾಲೆಗಿಂತ ಕಡಿಮೆಯಲ್ಲದ ದರ್ಜೆಯಲ್ಲಿ ನಿರ್ದಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರಬೇಕು.

* ಖಾಯಂ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದು, ಅರೆಕಾಲಿಕ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಅರ್ಜಿ ಎಲ್ಲಿಗೆ ಸಲ್ಲಿಸುವುದು?: ಈವರೆಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಲು ಅರ್ಜಿ ಸಲ್ಲಿಸದೇ ಇರುವ ಮತ್ತು ಮೇಲ್ಕಂಡ ಅರ್ಹತೆಯನ್ನು ಹೊಂದಿರುವ ಶಿಕ್ಷಕ ವೃಂದದ ಮತದಾರರು ಮೇ 6ರಂದು ಸಂಜೆ 5:30 ಗಂಟೆಯೊಳಗಾಗಿ ನಿಗದಿತ ನಮೂನೆ-19ನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕುಗಳ ನಿಯೋಜಿತ ಅಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅಧಿಕಾರಿಗಳಿಗೆ ಡಿಸಿ ಸೂಚನೆ: ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡೀಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಭಾರತ ಚುನಾವಣಾ ಆಯೋಗವು ರಾಜ್ಯದಲ್ಲಿ ವಿಧಾನ ಪರಿಷತ್ತಿಗೆ ಅವಧಿ ಮುಕ್ತಾಯವಾಗುವ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ದ್ವೈ-ವಾರ್ಷಿಕ ಚುನಾವಣೆ ಘೋಷಿಸಿದ್ದು, ಈಗಾಗಲೇ ಜಾರಿಯಲ್ಲಿರುವ ಲೋಕಸಭೆ ಚುನಾವಣೆ ಮಾದರಿ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳು ಈ ಚುನಾವಣೆಗೂ ಅನ್ವಯವಾಗುತ್ತದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮಕೈಗೊಳ್ಳಬೇಕು.   ಆಯೋಗದ ಮಾರ್ಗಸೂಚಿಗಳಂತೆ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವೇಳಾಪಟ್ಟಿ ಪ್ರಕಟ: ಚುನಾವಣಾ ಆಯೋಗವು ರಾಜ್ಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೇಳಾಪಟ್ಟಿಯನ್ವಯ ಮೇ 9ರಂದು ಅಧಿಸೂಚನೆ ಹೊರಡಿಸಲಾಗುವುದು. ಚುನಾವಣಾ ನಾಮಪತ್ರ ಸಲ್ಲಿಸಲು ಮೇ 16 ಕಡೆಯ ದಿನವಾಗಿದ್ದು, ಮೇ 17ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲಿಸಲಾಗುವುದು.  ನಾಮಪತ್ರ ಹಿಂಪಡೆಯಲು ಮೇ 20ರಂದು ಕಡೆಯ ದಿನವಾಗಿದ್ದು, ಜೂನ್ 3ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.  ಜೂನ್ 6ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

About The Author

You May Also Like

More From Author

+ There are no comments

Add yours