ತುಮಕೂರು: ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ; ಅಂತಿಮ ಪಟ್ಟಿಯಲ್ಲಿ 7299 ಮತದಾರರು

1 min read

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ; ಅಂತಿಮ ಪಟ್ಟಿಯಲ್ಲಿ 7299 ಮತದಾರರು

Tumkurnews
ತುಮಕೂರು: ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ 2023ರ ಡಿಸೆಂಬರ್ 30ರಂದು ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 4675 ಪುರುಷರು ಹಾಗೂ 2624 ಮಹಿಳೆಯರು ಸೇರಿ ಒಟ್ಟು 7299 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಜರುಗಿದ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದಲ್ಲಿ 750, ಮಧುಗಿರಿಯಲ್ಲಿ 501, ಶಿರಾ-752, ಚಿಕ್ಕನಾಯಕನಹಳ್ಳಿ-382, ತಿಪಟೂರು-549, ತುರುವೇಕೆರೆ-326, ಕುಣಿಗಲ್-247, ಗುಬ್ಬಿ-461, ಮಹಾನಗರ ಪಾಲಿಕೆ(ತುಮಕೂರು ನಗರ)-2313, ತುಮಕೂರು ಗ್ರಾಮಾಂತರ-692 ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ 326 ಸೇರಿ ಒಟ್ಟು 7299 ಶಿಕ್ಷಕ ಮತದಾರರಿದ್ದಾರೆ ಎಂದು ಸಭೆಯಲ್ಲಿ ಹಾಜರಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.
ಶಿಕ್ಷಕ ಮತದಾರರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಮೇ 6ರ ಸಂಜೆ 5.30 ಗಂಟೆವರೆಗೂ ಅವಕಾಶವಿದ್ದು, ಅರ್ಹ ಶಿಕ್ಷಕರು ನಿಗದಿತ ಅರ್ಜಿ ನಮೂನೆ-19ನ್ನು ಭರ್ತಿ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕುಗಳ ನಿಯೋಜಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸ್ವೀಕೃತ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿದ ನಂತರ ಅರ್ಹ ಶಿಕ್ಷಕರ ಹೆಸರನ್ನು ಸೇರಿಸಿ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದೆಂದರು.
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ. ನಾರಾಯಣಸ್ವಾಮಿ ಅವರ ಪದಾವಧಿಯು 2024ರ ಜೂನ್ 21ಕ್ಕೆ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 3ರಂದು ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್‍ನಲ್ಲಿ ಪ್ರಕಟಿಸಿರುವ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಶಿಕ್ಷಣ ಸಂಸ್ಥೆಗಳಿಂದ ನೋಂದಣಿ ಅರ್ಜಿ ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
ಆಗ್ನೇಯ ಶಿಕ್ಷಕರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿದ್ದು, 2023ರ ನವೆಂಬರ್ 1ಕ್ಕಿಂತ ಮೊದಲಿನ 6 ವರ್ಷಗಳ ಅವಧಿಯಲ್ಲಿ ಕನಿಷ್ಟ 3 ವರ್ಷಗಳಷ್ಟು ಪ್ರೌಢಶಾಲೆಗಿಂತ ಕಡಿಮೆಯಲ್ಲದ ದರ್ಜೆಯಲ್ಲಿ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತರಾಗಿರುವವರು ಈ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಹರಿರುತ್ತಾರೆ. ಖಾಸಗಿ ವ್ಯಕ್ತಿ ಮತ್ತು ರಾಜಕೀಯ ಪಕ್ಷಗಳಿಂದ ದೊಡ್ಡ ಪ್ರಮಾಣದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲವೆಂದು ತಿಳಿಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆಗೆ ವೆಚ್ಚ ಮಿತಿ ಇಲ್ಲದಿದ್ದರೂ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಶಿಕ್ಷಕ ಮತದಾರರಿಗೆ ನಗದು, ಇತರೆ ಉಚಿತ ವಸ್ತುಗಳ ಮೂಲಕ ಆಮಿಷವೊಡ್ಡುವ ಅವಕಾಶವಿರುವುದರಿಂದ ಮಾದರಿ ನೀತಿ ಸಂಹಿತೆ ಸಮರ್ಪಕ ಅನುಷ್ಟಾನಕ್ಕಾಗಿ ಎಫ್‍ಎಸ್‍ಟಿ ತಂಡ ಮತ್ತು ಎಂಸಿಎಂಸಿ ತಂಡವನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪಾವಗಡ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ತಲಾ 2; ಮಧುಗಿರಿ, ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಕುಣಿಗಲ್, ಗುಬ್ಬಿ, ತುಮಕೂರು ಗ್ರಾಮಾಂತರ ಹಾಗೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 1; ತುಮಕೂರು ನಗರ ಕ್ಷೇತ್ರದಲ್ಲಿ 4 ಸೇರಿ 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಮತದಾರರ ಪಟ್ಟಿ, ಮತಗಟ್ಟೆ ಸ್ಥಾಪನೆ, ಮಾದರಿ ನೀತಿ ಸಂಹಿತೆ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಸಲಹೆ, ಸೂಚನೆ, ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದೆ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಚುನಾವಣಾ ತಹಶೀಲ್ದಾರ್ ರೇಷ್ಮ ಶೆಟ್ಟಿ, ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾ ಶಾಖೆ ಸಿಬ್ಬಂದಿ ಸೇರಿದಂತೆ ಮತ್ತಿತರರು ಹಾಜರಿದ್ದರು.

About The Author

You May Also Like

More From Author

+ There are no comments

Add yours