ತುಮಕೂರು: ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ಬೆಸ್ಕಾಂಗೆ ಜಿಲ್ಲಾಧಿಕಾರಿ ಸೂಚನೆ

1 min read

 

ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ಬೆಸ್ಕಾಂಗೆ ಜಿಲ್ಲಾಧಿಕಾರಿ ಸೂಚನೆ

Tumkurnews
ತುಮಕೂರು: ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದಿಂದ ರೈತರು ಸೇರಿದಂತೆ ಯಾರೇ ಕರೆ ಮಾಡಿದರೂ ಬೆಸ್ಕಾಂ ಅಧಿಕಾರಿ ಮತ್ತು ಸಿಬ್ಬಂದಿ ತಕ್ಷಣವೇ ಕರೆ ಸ್ವೀಕರಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಮತ್ತು 1912 ಹೆಲ್ಪ್ ಲೈನ್‍ಗೆ ದಾಖಲಾಗುವ ದೂರವಾಣಿ ಕರೆಗಳು ಮತ್ತು ಕರೆಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕ್ರಮಗಳ ಕುರಿತು ತಮಗೆ ಪ್ರತಿ ದಿನ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೊಸದಾಗಿ ಕೊರೆಯಲಾದ 139 ಕೊಳವೆ ಬಾವಿಗಳ ಪೈಕಿ 125 ಕೊಳವೆ ಬಾವಿಗಳಿಗೆ ಈಗಾಗಲೇ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದ್ದು, ಇನ್ನುಳಿದ 14 ಬೋರ್‍ವೆಲ್‍ಗಳಿಗೆ ತಕ್ಷಣವೇ ವಿದ್ಯುದ್ದೀಕರಣಗೊಳಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಕುಣಿಗಲ್‍ನಲ್ಲಿ ಒಂದು ರಾಸು ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ 2 ರಾಸುಗಳು ಮೃತಪಟ್ಟಿದ್ದು, ತ್ವರಿತಗತಿಯಲ್ಲಿ ಪರಿಹಾರ ಪಾವತಿಯಾಗಬೇಕು. ತಹಶೀಲ್ದಾರ್ ಮತ್ತು ಇಓಗಳು ಖುದ್ದಾಗಿ ಸಂತ್ರಸ್ತರ ಮನೆಗಳಿಗೆ ತೆರಳಿ ಚೆಕ್ ವಿತರಿಸಬೇಕು. ಅಂತೆಯೇ ಬೆಳೆ ಹಾನಿ ಬಗ್ಗೆ ವರದಿಯಾದಲ್ಲಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ ವರದಿ ನೀಡಬೇಕು. ನಿಯಮಾನುಸಾರ ಪರಿಹಾರಕ್ಕೆ ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ನೀತಿ ಧೋರಣೆಯನ್ನು ಸಹಿಸುವುದಿಲ್ಲವೆಂದು ಎಚ್ಚರಿಕೆ ನೀಡಿದರು.
ಖಾಸಗಿ ಬೋರ್‍ವೆಲ್‍ಗಳ ರೈತರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಬಾಡಿಗೆಯನ್ನು ಪ್ರತಿ ತಿಂಗಳು ಪಾವತಿ ಮಾಡಬೇಕು. ವಿಳಂಬ ಧೋರಣೆ ಅನುಸರಿಸಬಾರದು. ಜಿಲ್ಲೆಯಾದ್ಯಂತ ಒಟ್ಟು 85 ಖಾಸಗಿ ಕೊಳವೆಬಾವಿಗಳಿದ್ದು, ಈ ಖಾಸಗಿ ಕೊಳವೆ ಮಾಲೀಕರ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಜಿಲ್ಲಾ ಪಂಚಾಯತಿಗೆ ಕಳುಹಿಸಿಕೊಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಅವರು ಇಓಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours