ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಿಸಿನೀರಿನ ಸೌಲಭ್ಯ: ಪರಮೇಶ್ವರ್ ಭರವಸೆ

1 min read

https://chat.whatsapp.com/Haj1IrKLgZpAIglCBfQbtB" alt="" width="397" height="133" />

ಬಿಸಿ ನೀರು ಬೇಕು: ಸಚಿವರಲ್ಲಿ ವಿದ್ಯಾರ್ಥಿನಿಯರ ಬೇಡಿಕೆ

Tumkurnews
ತುಮಕೂರು: ಚಳಿಗಾಲದಲ್ಲಿ ಸ್ನಾನಕ್ಕೆ ಬಿಸಿ ನೀರು ಸೌಲಭ್ಯ ಕಲ್ಪಿಸಬೇಕೆಂದು ಹಾಸ್ಟೆಲ್ ವಿದ್ಯಾರ್ಥಿನಿಯರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು.
ನಗರದ ಬಿ.ಹೆಚ್ ರಸ್ತೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ಪರಿಶಿಷ್ಟ ಜಾತಿ ಹಾಸ್ಟೆಲ್‍ಗೆ ಶುಕ್ರವಾರ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಈ ಬೇಡಿಕೆಯಿಟ್ಟರು.
ಕಳೆದ ಶುಕ್ರವಾರ ಜೂನ್ 7ರಂದು ಇದೇ ಹಾಸ್ಟೆಲ್‍ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಕಾಣಿಸಿಕೊಂಡು ಕೆಲ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಗಾಬರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಪರಮೇಶ್ವರ ಅವರು ಹಾಸ್ಟೆಲ್‍ಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಸಿ ನೀರಿನ ಸೌಲಭ್ಯವನ್ನು ಒದಗಿಸಬೇಕೆಂದು ಹಾಸ್ಟೆಲ್ ವಿದ್ಯಾರ್ಥಿನಿಯರು ಗಮನಕ್ಕೆ ತಂದಿದ್ದಾರೆ. ವಿದ್ಯಾರ್ಥಿ ನಿಲಯಗಳಿಗೆ ಬಿಸಿ ನೀರಿನ ಸೌಲಭ್ಯ ಕಲ್ಪಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ತುಮಕೂರು: ಕಲುಷಿತ ನೀರು ಕುಡಿದು ಇಬ್ಬರ ಸಾವು, ಇಬ್ಬರು ಅಮಾನತು: ಪರಂ ಭೇಟಿ
ವಿದ್ಯಾರ್ಥಿ ನಿಲಯಗಳಲ್ಲಿ 2500 ವಿದ್ಯಾರ್ಥಿನಿಯರಿಗೆ ಮಾತ್ರ ಪ್ರವೇಶಾವಕಾಶವಿದ್ದು, ಇನ್ನು ಹೆಚ್ಚಿನ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಬೇಕೆಂದು ಪೋಷಕರು ಒತ್ತಾಯಿಸುತ್ತಿದ್ದಾರೆ. ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ಸಂಖ್ಯಾಬಲವನ್ನು 5000ಕ್ಕೆ ಹೆಚ್ಚಿಸುವಂತೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತಷ್ಟು ಹಾಸ್ಟೆಲ್‍ಗಳನ್ನು ತೆರೆಯಬೇಕೆಂದು ಮನವಿಗಳು ಬರುತ್ತಿವೆ.
ತುಮಕೂರು ಜಿಲ್ಲೆಯು ಶೈಕ್ಷಣಿಕ ಜಿಲ್ಲೆಯೆಂದು ಪ್ರಸಿದ್ಧಿ ಹೊಂದಿರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳು ಶಿಕ್ಷಣ ಬಯಸಿ ಜಿಲ್ಲೆಗೆ ಬರುತ್ತಿದ್ದಾರೆ. ಈ ನಿಟ್ಟಿನಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಲಯಗಳನ್ನು ತೆರೆದು ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿಸಿ ಅಗತ್ಯ ಸವಲತ್ತುಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟದಲ್ಲಿ ಬಾಳೆಹಣ್ಣು, ಮೊಟ್ಟೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಬಂಧನ ಸಾಧ್ಯತೆ: ಪರಮೇಶ್ವರ್ ಹೇಳಿದ್ದೇನು? ವಿಡಿಯೋ
ಜಿಲ್ಲೆಯನ್ನು ಹಸಿರು ಜಿಲ್ಲೆಯಾಗಿಸುವಲ್ಲಿ ಪ್ರತಿ ವರ್ಷ 5 ಲಕ್ಷ ಸಸಿಗಳನ್ನು ನೆಟ್ಟು ಬೆಳೆಸುವ ಉದ್ದೇಶವನ್ನು ಹೊಂದಲಾಗಿದೆ. ಪ್ರಸಕ್ತ ವರ್ಷ 3.5ಲಕ್ಷ ಸಸಿಗಳನ್ನು ನೆಟ್ಟು ಪೋಷಿಸಲು ಜಿಲ್ಲಾ ಪಂಚಾಯತಿ ಹಾಗೂ ಅರಣ್ಯ ಇಲಾಖೆಗಳು ಜೋಡಿ ಹೆಜ್ಜೆಗಳನ್ನಿಟ್ಟಿವೆ. ನೆಟ್ಟ ಸಸಿಗಳನ್ನು 1 ವರ್ಷ ಕಾಲ ನಿರ್ವಹಣೆ ಮಾಡಲಾಗುವುದು. ಪ್ರತಿ 3 ತಿಂಗಳಿಗೊಮ್ಮೆ ಸಸಿಗಳ ಬೆಳವಣಿಗೆ ಬಗ್ಗೆ ವರದಿ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿಯಿಂದ ಸೂಚನೆ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಸಸಿಗಳನ್ನು ನೆಡಲು ಇದು ಸೂಕ್ತ ಕಾಲವಾಗಿರುವುದರಿಂದ ಹಸಿರು ಗ್ರಾಮ ಯೋಜನೆಯಡಿ 3.5 ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕಿಂದು ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಆರಂಭವಾಗಿರುವ ಉತ್ತಮ ಮುಂಗಾರು ಮಳೆ ರೈತರ ಮೊಗದಲ್ಲಿ ಸಂತಸ ತಂದಿದೆ. ರೈತರ ಬಿತ್ತನೆ ಕಾರ್ಯಕ್ಕೆ ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ದಾಸ್ತಾನು ಮಾಡಲಾಗಿದ್ದು, ಬೇಡಿಕೆಗನುಗುಣವಾಗಿ ರಿಯಾಯಿತಿ ದರದಲ್ಲಿ ರೈತರಿಗೆ ವಿತರಿಸಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ 3.25 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಸಕಲ ಸಿದ್ಧತೆಗಳು ಚುರುಕುಗೊಂಡಿವೆ. ಈ ಪೈಕಿ ಪ್ರಮುಖ ಬೆಳೆ ರಾಗಿಯನ್ನು ಸುಮಾರು 2.5 ಲಕ್ಷ ಹೆ. ಪ್ರದೇಶದಲ್ಲಿ ಹಾಗೂ ಉಳಿದಂತೆ ಮೆಕ್ಕೆಜೋಳ, ಶೇಂಗಾ ಮತ್ತಿತರ ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಮಧುಗಿರಿ ತಾಲೂಕು ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವರದಿಯಾದ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿ ದಿನ ಭೇಟಿ ನೀಡಿ ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡಲು ಹಾಗೂ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.
ಚಿನ್ನೇನಹಳ್ಳಿಯಲ್ಲಿ ವಾಂತಿ-ಭೇದಿಯಿಂದ 6 ಮಂದಿ ದುರ್ಮರಣವನ್ನಪ್ಪಿದ್ದರೂ ಜಿಲ್ಲಾಡಳಿತದಿಂದ ಕೇವಲ 2 ಮಂದಿ ಮಾತ್ರ ಮೃತಪಟ್ಟಿದ್ದಾರೆಂದು ಮಾಹಿತಿ ನೀಡಲಾಗುತ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಜಿಲ್ಲಾಸ್ಪತ್ರೆಯಲ್ಲಿ ವಾಂತಿ-ಭೇದಿಯಿಂದ ಇಬ್ಬರು ವಯೋವೃದ್ಧರು ಮಾತ್ರ ಮೃತಪಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟವರು ಯಾವ ಕಾರಣದಿಂದ ಮೃತಪಟ್ಟಿದ್ದಾರೆಂದು ಪುನರ್‌ ಪರಿಶೀಲಿಸಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ವಾಂತಿ-ಭೇದಿಗೆ ಮೂಲ ಕಾರಣವನ್ನು ಪತ್ತೆ ಹಚ್ಚಲು ಕುಡಿಯುವ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಪೂರ್ಣ ವರದಿ ಇನ್ನೂ ಬಂದಿರುವುದಿಲ್ಲ. ಕೆಲ ಗ್ರಾಮಸ್ಥರು ಓವರ್ ಹೆಡ್ ಟ್ಯಾಂಕ್ ನೀರು ಕುಡಿದಿದ್ದೇವೆಂದು, ಕೆಲ ಗ್ರಾಮಸ್ಥರು ಪವಿತ್ರವೆನ್ನಲಾಗುವ ಬೆಟ್ಟದ ಮೇಲಿಂದ ತಂದ ನೀರಿನಿಂದ ಮಾಡಿದ ತಂಬಿಟ್ಟು ಸೇವಿಸಿದ್ದೇವೆಂದು ಹೇಳುತ್ತಿದ್ದಾರೆ. ನೀರಿನ ಮಾದರಿ ಪೂರ್ಣ ಪರೀಕ್ಷಾ ವರದಿ ಬಂದ ನಂತರವಷ್ಟೇ ಮೂಲ ಕಾರಣವನ್ನು ಅರಿಯಲು ಸಾಧ್ಯವೆಂದು ತಿಳಿಸಿದರು.
ವಾಂತಿ-ಭೇದಿಯಿಂದ ದಾಖಲಾದವರ ಚಿನ್ನೇನಹಳ್ಳಿ ಗ್ರಾಮಸ್ಥರ ಆರೋಗ್ಯ ವಿಚಾರಿಸಲು ಜಿಲ್ಲಾಸ್ಪತ್ರೆ ಶುಕ್ರವಾರ ಬೆಳಿಗ್ಗೆ ನೂತನ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಯಾವೊಬ್ಬ ಅಧಿಕಾರಿಯೂ ಹಾಜರಾಗದೆ ಶಿಷ್ಟಾಚಾರ ಪಾಲಿಸಿಲ್ಲವೆಂದು ಆರೋಪಿಸಲಾಗಿದೆ ಎನ್ನುವ ಮಾಧ್ಯಮದವರ ಮಾತಿಗೆ ಉತ್ತರಿಸಿದ ಸಚಿವರು ಶಿಷ್ಟಾಚಾರದ ಪಾಲನಾ ನಿಯಮದ ಪ್ರಕಾರವೇ ಅಧಿಕಾರಿಗಳು ನಡೆದುಕೊಂಡಿದ್ದಾರೆ. ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿ ಮುಂಚೆಯೇ ನಿಗಧಿಯಾಗಿದ್ದ ಜಿಲ್ಲಾ ಸಚಿವರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಶಿಷ್ಟಾಚಾರದಂತೆಯೇ ಭಾಗಿಯಾಗಿದ್ದಾರೆ ಹೊರತು ಯಾರನ್ನೂ ಮೆಚ್ಚಿಸಲು ಅಲ್ಲ. ನನ್ನ ಎಷ್ಟೋ ಕಾರ್ಯಕ್ರಮಗಳಲ್ಲಿ ಕೆಲಸದ ಒತ್ತಡದಿಂದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಜರಿರುವುದಿಲ್ಲ. ನಾನೆಂದೂ ತಪ್ಪು ತಿಳಿದಿಲ್ಲವೆಂದು ಸ್ಪಷ್ಟನೆ ನೀಡಿದರು.
ಇದಕ್ಕೂ ಮುನ್ನ ವಿದ್ಯಾರ್ಥಿ ನಿಲಯದ ಲೈಬ್ರರಿ, ಕಂಪ್ಯೂಟರ್ ಕೊಠಡಿ, ಊಟದ ಕೋಣೆ, ವಿದ್ಯಾರ್ಥಿನಿಯರ ವಸತಿ ಕೋಣೆ, ಅಡುಗೆ ಮನೆಯನ್ನು ಪರಿಶೀಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜಾ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಸಹಾಯಕ ನಿರ್ದೇಶಕ ದಿನೇಶ್ ಸೇರಿದಂತೆ ಮತ್ತಿತರರಿದ್ದರು.

About The Author

You May Also Like

More From Author

+ There are no comments

Add yours