ಅಲೆಮಾರಿ ಸಮುದಾಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

1 min read

 

ಅಲೆಮಾರಿ ಸಮುದಾಯಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ
Tumkur news
ತುಮಕೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅನೇಕ ಅಲೆಮಾರಿ ಸಮುದಾಯದವರು ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳಿಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಗ್ರಾಮಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಿ ಅಗತ್ಯ ದಾಖಲೆಗಳನ್ನು ಪಡೆಯುವಂತೆ ಮಾಡಬೇಕು ಎಂದು ಸೂಚಿಸಿದರು.
ಪ್ರತಿ 3 ತಿಂಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು. ಅಲೆಮಾರಿ ಸಮುದಾಯದವರಿಗೆ ವಿಶೇಷ ವಸತಿ ಯೋಜನೆಯಡಿ ನಿವೇಶನ ಸೌಲಭ್ಯಕ್ಕಾಗಿ 3.50 ಲಕ್ಷ ರೂ.ಗಳ ಸಹಾಯಧನ ನಿಗಧಿಪಡಿಸಲಾಗಿದ್ದರೂ ಸಹ ರಾಜೀವ್ ಗಾಂಧಿ ವಸತಿ ನಿಗಮವು ಕೇವಲ 2 ಲಕ್ಷ ರೂ.ಗಳನ್ನು ನೀಡುತ್ತಿದ್ದು ಮನೆ ನಿರ್ಮಿಸಿಕೊಳ್ಳಲು ಹೆಚ್ಚಿನ ಅನುದಾನ ನೀಡಬೇಕು ಎಂದು ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ನಿವೇಶನ ನೀಡಿರುವ ಪ್ರದೇಶಗಳಲ್ಲಿ ಕಲ್ಲು ಬಂಡೆಗಳಿದ್ದು, ಜನರು ವಾಸಿಸಲು ಯೋಗ್ಯವಾಗಿಲ್ಲ. ಉತ್ತಮ ನಿವೇಶನವನ್ನು ನೀಡಬೇಕು ಎಂದು ಸಮುದಾಯದ ಮುಖಂಡರು ಸಭೆಗೆ ಬೇಡಿಕೆಯಿಟ್ಟರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಪ್ರದೇಶಗಳು ಮಜಿರೆ ಗ್ರಾಮಗಳಾಗಿದ್ದು ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ನಿವೇಶನಗಳ ಸಮಸ್ಯೆ ಉಂಟಾಗುತ್ತಿದೆ. ಮಜಿರೆ ಗ್ರಾಮಗಳನ್ನು ಶೀಘ್ರವಾಗಿ ಕಂದಾಯ ಗ್ರಾಮಗಳನ್ನಾಗಿಸಿ ನಿವೇಶನ ಹಂಚಿಕೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಯಿಂದ ಒದಗಿಸುವ ಸೌಲಭ್ಯಗಳಲ್ಲಿ ಅಲೆಮಾರಿ ಸಮುದಾಯಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್ ಮಾತನಾಡಿ, ಜಿಲ್ಲೆಯಲ್ಲಿ ಮೊದಲ ಬಾರಿಗೆ ಅಲೆಮಾರಿ ಸಮುದಾಯಗಳ ಜಿಲ್ಲಾ ಮಟ್ಟದಲ್ಲಿ ಕುಂದು ಕೊರತೆ ಸಭೆ ನಡೆಸುತ್ತಿರುವುದು ಅಲೆಮಾರಿ ಸಮುದಾಯಗಳ ವಿವಿಧ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಿದೆ. ಅಧಿಕಾರಿಗಳು ಮತ್ತು ಅಲೆಮಾರಿ ಸಮುದಾಯಗಳು ಸಮನ್ವತೆ ಕಾಯ್ದುಕೊಂಡಾಗ ಅಲೆಮಾರಿ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ. ಕುಂದು ಕೊರತೆ ಸಭೆಗಳಲ್ಲಿ ವೈಯಕ್ತಿಕ ಸಮಸ್ಯೆಗಳಿಗಿಂತ ಸಮುದಾಯ ಕೇಂದ್ರಿತ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಮುದಾಯದ ಮುಖಂಡರಿಗೆ ಮನವರಿಕೆ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಉಪ ವಿಭಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ, ಗೋಟೂರು ಶಿವಪ್ಪ ಸೇರಿದಂತೆ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಅಲೆಮಾರಿ ಸಮುದಾಯಗಳ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

About The Author

You May Also Like

More From Author

+ There are no comments

Add yours