ನ.7ರಂದು ಜಿಲ್ಲೆಗೆ ರಾಜ್ಯಪಾಲರು, ಮುಖ್ಯಮಂತ್ರಿ ಆಗಮನ: ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

1 min read

 

ನ.7ರಂದು ಜಿಲ್ಲೆಗೆ ರಾಜ್ಯಪಾಲರು, ಮುಖ್ಯಮಂತ್ರಿ ಆಗಮನ: ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

Tumkurnews
ತುಮಕೂರು: ರಾಜ್ಯದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 7ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನೆರವೇರಿಸಲು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಯಾವುದೇ ಲೋಪವಾಗದಂತೆ ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಬಾವಿ ಸಭೆ ನಡೆಸಿ ಮಾತನಾಡಿದ ಅವರು, ಬಿದರಕಟ್ಟೆಯಲ್ಲಿ ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಉದ್ಘಾಟನೆ ಹಾಗೂ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ, ಶಂಕುಸ್ಥಾಪನೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಲು ಗಣ್ಯರು ಆಗಮಿಸುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ-48ರ ಅಕ್ಕ-ಪಕ್ಕದಲ್ಲಿ ಬಿದ್ದಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ತೆರವುಗೊಳಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅನುಪ್ ರ‍್ಮಾ ಅವರಿಗೆ ಸೂಚನೆ ನೀಡಿದರು.
ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮೂಡಿಬರಬೇಕು. ಕಾರ್ಯಕ್ರಮದ ನಿರೂಪಕರ, ಹೆಲಿಪ್ಯಾಡ್, ಗ್ರೀನ್ ರೂಂ, ವೇದಿಕೆ ನಿರ್ಮಾಣ, ಆಹ್ವಾನ ಪತ್ರಿಕೆ ಮುದ್ರಣ ಹಾಗೂ ವಿತರಣೆ, ಆಸನದ ವ್ಯವಸ್ಥೆ, ಧ್ವನಿ ಮತ್ತು ಬೆಳಕು, ಸಾರ್ವಜನಿಕರಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯಗಳು, ವೈದ್ಯಕೀಯ ಸಹಾಯ ಕೇಂದ್ರ ಇತ್ಯಾದಿ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಮಾಡುವ ಬಗ್ಗೆ ನಿರ್ದೇಶನಗಳನ್ನು ನೀಡಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ತಂಡ, ಅಗ್ನಿಶಾಮಕ ವಾಹನಗಳ ವ್ಯವಸ್ಥೆ ಮಾಡಬೇಕು. ಶಂಕುಸ್ಥಾಪನೆಯಾಗಲಿರುವ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಡಿಗಲ್ಲುಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಕಾರ್ಯಕ್ರಮಕ್ಕೆ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಆಸ್ಪತ್ರೆ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಅಥವಾ ಅಸೌಕರ್ಯ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜುಮ್ ಜುಮ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಚಿತ್ರ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಬಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮಾತನಾಡಿದರು.

About The Author

You May Also Like

More From Author

+ There are no comments

Add yours