ತುಮಕೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮೇ 20ಕ್ಕೆ 3 ವರ್ಷ ತುಂಬಲಿದ್ದು, ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಅಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ನಿಮಿತ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ತಾತ್ಕಾಲಿಕವಾಗಿ ಚಿಂತಿಸಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ‘ಜಿಲ್ಲೆಯಲ್ಲಿ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಸಮಾವೇಶವನ್ನು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಈಗ ಮೇ 20ರಂದೇ ರಾಜ್ಯ ಸರ್ಕಾರಕ್ಕೆ 3 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ತುಮಕೂರಿನಲ್ಲೇ ರಾಜ್ಯ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.
