ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಪೂರ್ಣಗೊಳಿಸಲು 2027ರವರೆಗೆ ಗಡುವು: ಪರಮೇಶ್ವರ್
ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಬಳ್ಳಾರಿಯಿಂದ ಪಾವಗಡದವರೆಗೆ ಪ್ರಾಯೋಗಿಕವಾಗಿ ರೈಲನ್ನು ಓಡಿಸಲಾಗಿದೆ. ಪಾವಗಡದಿಂದ ತುಮಕೂರಿನವರೆಗಿನ ಕಾಮಗಾರಿ ಬೇರೆ ಬೇರೆ ಕಾರಣಗಳಿಂದ ವಿಳಂಬವಾಗಿತ್ತು. ಇದೀಗ ಅದನ್ನೂ ಬಗೆಹರಿಸಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ವರ್ಷದೊಳಗಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಪರಮೇಶ್ವರ್ ಹೇಳಿದರು.
Tumkur news
ತುಮಕೂರು: ತುಮಕೂರು-ರಾಯದುರ್ಗ ರೈಲ್ವೆ ಯೋಜನೆಯ ಸಂಬಂಧಿಸಿದಂತೆ ಪಾವಗಡದಿಂದ ತುಮಕೂರುವರೆಗಿನ ಕಾಮಗಾರಿಯನ್ನು ವರ್ಷದೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಉಪ ಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ತಿಳಿಸಿದ್ದಾರೆ.
ತುಮಕೂರು-ರಾಯದುರ್ಗ ರೈಲ್ವೆ ಮಾರ್ಗದ ಪಾವಗಡ ರೈಲು ನಿಲ್ದಾಣ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಬಳ್ಳಾರಿಯಿಂದ ಪಾವಗಡದವರೆಗೆ ಪ್ರಾಯೋಗಿಕವಾಗಿ ರೈಲನ್ನು ಓಡಿಸಲಾಗಿದೆ. ಪಾವಗಡದಿಂದ ತುಮಕೂರಿನವರೆಗಿನ ಕಾಮಗಾರಿ ಬೇರೆ ಬೇರೆ ಕಾರಣಗಳಿಂದ ವಿಳಂಬವಾಗಿತ್ತು. ಇದೀಗ ಅದನ್ನೂ ಬಗೆಹರಿಸಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ವರ್ಷದೊಳಗಾಗಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿರುವುದಾಗಿ ಅವರು ಹೇಳಿದರು. 2007ರಲ್ಲಿ ಲಾಲೂ ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಆಗಿನ ಮಡಕಶಿರಾ ಶಾಸಕ ರಘುವೀರರೆಡ್ಡಿ, ಪಾವಗಡ ಶಾಸಕ ವೆಂಕಟರಮಣಪ್ಪ ಅವರೊಂದಿಗೆ ರೈಲ್ವೆ ಸಚಿವರನ್ನು ಭೇಟಿಯಾಗಿ ತುಮಕೂರು-ರಾಯದುರ್ಗ ರೈಲು ಮಾರ್ಗ ನೀಡುವಂತೆ ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಸರ್ಕಾರದ ರೈಲ್ವೆ ಆಯವ್ಯಯ ಪಿಂಕ್ ಬುಕ್‌ನಲ್ಲಿ ಈ ಯೋಜನೆಗೆ 98 ಕೋಟಿ ರೂ. ಅಂದಾಜು ವೆಚ್ಚವನ್ನು ನಿಗದಿಗೊಳಿಸಲಾಗಿತ್ತು. ಆನಂತರ ಬಂದ ಸರ್ಕಾರ ಈ ಯೋಜನೆಯನ್ನು ಕೈಗೆತ್ತಿಕೊಂಡು ಕಾರ್ಯರೂಪಕ್ಕೆ ತಂದಿದೆ ಎಂದರು.
ಭೂಸ್ವಾಧೀನ ಇನ್ನಿತರೆ ಕಾರಣಗಳಿಂದಾಗಿ ಈ ಯೋಜನೆ ವಿಳಂಬವಾಗಿದೆ. ಆದರೆ ಸದ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸೂಚಿಸಲಾಗಿದೆ. ಯೋಜನೆಯ ಪ್ರಕಾರ 2028ಕ್ಕೆ ತುಮಕೂರು-ರಾಯದುರ್ಗ ಸಂಪೂರ್ಣ ಮಾರ್ಗ ಪೂರ್ಣಗೊಳ್ಳುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದು, ಅದಕ್ಕೆ ಮುಂಚಿತವಾಗಿಯೇ 2027ರ ಹೊತ್ತಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಈ ಭಾಗದ ಜನರಿಗೆ ಅತ್ಯಂತ ಉಪಯುಕ್ತವಾಗಿದೆ ಎಂದು ತಿಳಿಸಿದ ಅವರು, ಬಳ್ಳಾರಿಯಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಆಗಮಿಸುವ ಪ್ರಯಾಣಿಕರು ರೈಲು ಮಾರ್ಗದಲ್ಲಿ ಅತೀ ಕಡಿಮೆ ಸಮಯದಲ್ಲಿ ಕ್ರಮಿಸಲು ಅನುಕೂಲವಾಗಿದೆ. ಅಲ್ಲದೆ, ಈ ಭಾಗದ ಹಲವಾರು ಸಮಸ್ಯೆಗಳು ಈ ಯೋಜನೆಯಿಂದ ಬಗೆಹರಿಯಲಿವೆ ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ ತಿಳಿಸಿದರು.
ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆ: ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧೀಕ್ಷಕ ಇಂಜಿನಿಯರ್ ಇಂದ್ರಕುಮಾರ್ ಹಾಗೂ ಕಾರ್ಯಪಾಲಕ ಇಂಜಿನಿಯರ್ ವಾಸುದೇವ್ ಅವರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ: ಜಿ. ಪರಮೇಶ್ವರ ಅವರು, ಪಾವಗಡ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ 2600 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿರುವ ತುಂಗಭದ್ರಾ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯಲ್ಲಿ ಕೆಲವು ಸಮಸ್ಯೆಗಳಿದ್ದವು. ಇವುಗಳನ್ನು ಬಗೆಹರಿಸುವ ಸಲುವಾಗಿ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದಿರುವುದಾಗಿ ತಿಳಿಸಿದರು.
ಸದರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಸಂಬಂಧಿಸಿದಂತೆ ಸರ್ಕಾರದ ಉದ್ದೇಶ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಈ ನಿಟ್ಟಿನಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ಸರ್ಕಾರದ ನೂತನ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
