ಜೂ.21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ: ಯಶಸ್ವಿಯಾಗಿ ನಡೆಸುವಂತೆ ಡಿ.ಸಿ. ಸೂಚನೆ
Tumkur news
ತುಮಕೂರು: ಜಿಲ್ಲಾಡಳಿತ, ಆಯುಷ್ ಇಲಾಖೆ, ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆ, ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಇತರೆ ಸಂಸ್ಥೆಯ ಸಹಯೋಗದಲ್ಲಿ ಜೂನ್ 21ರಂದು ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಿಷ್ಟಾಚಾರವನ್ನು ಪಾಲಿಸಿ ಯಶಸ್ವಿಯಾಗಿ ನಡೆಸುವಂತೆ ಜಿಲ್ಲಾ ಆಯುಷ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣ ಇತ್ತೀಚೆಗೆ ನಡೆದ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಶಾಲಾ ವಿದ್ಯಾರ್ಥಿಗಳು, ವಸತಿ ನಿಲಯದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮವಹಿಸಬೇಕು ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪತಂಜಲಿ ಯೋಗ ಶಿಕ್ಷಣ ಸಮಿತಿ, ಎನ್.ಸಿ.ಸಿ., ಎನ್‌ಎಸ್‌ಎಸ್, ಸಾರ್ವಜನಿಕ ಶಿಕ್ಷಣ ಇಲಾಖೆ, ಬ್ರಹ್ಮ ಕುಮಾರಿ ಸಮಾಜ, ನೆಹರು ಯುವ ಕೇಂದ್ರ, ಯೂತ್ ಫಾರ್ ಸೇವಾ, ಕಮಾಂಡೆಟ್, 12ನೇ ಪಡೆ, ಕೆ.ಎಸ್.ಆರ್.ಪಿ, ತುಮಕೂರು ಹಾಗೂ ಇತರೆ ಎಲ್ಲಾ ಸರ್ಕಾರ, ಸರ್ಕಾರೇತರ ಸಂಸ್ಥೆಗಳ ಸಹಕಾರ ಪಡೆಯುವಂತೆ ಅವರು ನಿರ್ದೇಶಿಸಿದರು.
ಕಾರ್ಯಕ್ರಮದ ಸ್ಥಳದಲ್ಲಿ ಆಂಬುಲೆನ್ಸ್’ನೊಂದಿಗೆ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದ ಅವರು, ಕಾರ್ಯಕ್ರಮ ಸ್ಥಳದಲ್ಲಿ ಸ್ವಚ್ಚತೆ, ಶುಭ್ರತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು ಕಾರ್ಯಕ್ರಮಕ್ಕೆ ಪೊಲೀಸ್ ಬಂದೋಬಸ್ತ್ ಪಡೆಯಲು ಹಾಗೂ ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಸೂಚಿಸಿದ ಅವರು, ಯೋಗಾ ಕಾರ್ಯಕ್ರಮಕ್ಕೆ ಗ್ರೀನ್ ಮ್ಯಾಟ್, ಸ್ಟೇಜ್ ಹಾಗೂ ಧ್ವನಿವರ್ಧಕ ವ್ಯವಸ್ಥೆ ಒದಗಿಸುವಂತೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಕ್ಕಳಿಗೆ ಹಾಲು ಹಾಗೂ ನಂದಿನಿ ಕುಕ್ಕೀಸ್ ವಿತರಿಸಲು ಕೆ.ಎಂ.ಎಫ್. ಅಧಿಕಾರಿಗಳಿಗೆ ಸೂಚಿಸಿದರು.
12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಒಂದು ಸಾರ್ವಜನಿಕ ಕಾರ್ಯಕ್ರಮವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ, ಯೋಗದ ಮಹತ್ವವನ್ನು ಪಡೆದುಕೊಳ್ಳುವಂತೆ ಅವಕಾಶ ಕಲ್ಪಿಸಿ ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಪಂ ಸಿಇಒ ಬಿ.ವಿ. ಅಶ್ವಿಜ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಹಾಗೂ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ, ಜಿಲ್ಲೆಯ ವಿವಿಧ ಇಲಾಖಾ ಅಧಿಕಾರಿಗಳು ಸೇರಿದಂತೆ ವಿವಿಧ ಯೋಗಾ ಸಂಘ ಸಂಸ್ಥೆಗಳು, ಯೋಗ ತರಬೇತಿದಾರರು, ಬ್ರಹ್ಮ ಕುಮಾರಿ ಸಮಾಜದ ಮುಖ್ಯಸ್ಥರು ಉಪಸ್ಥಿತರಿದ್ದರು.
