ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ಗೆ ಜಯಭೇರಿ: ವಿಜಯೋತ್ಸವ
ಮೈತ್ರಿ ಪಕ್ಷಗಳ ಸಮನ್ವಯದ ಶ್ರಮಕ್ಕೆ ಸಂದ ಜಯ: ಜಿ.ಬಿ. ಜ್ಯೋತಿಗಣೇಶ್
Tumkurnews.in
ತುಮಕೂರು: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು 23 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ನಗರದ ಬಿಜಿಎಸ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು. ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಪದವೀಧರ ಮತದಾರರು ಚುನಾವಣೆಯ ಫಲಿತಾಂಶದ ಮೂಲಕ ಉತ್ತರ ನೀಡಿದ್ದಾರೆ. ನಾಲ್ಕೂ ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಈ ಫಲಿತಾಂಶ ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಹಾಗೂ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಶ್ರಮಿಸಿದ್ದಾರೆ. ಮುಂಬರುವ ಚುನಾವಣೆಗಳಲ್ಲಿಯೂ ಎರಡೂ ಪಕ್ಷಗಳು ಇದೇ ರೀತಿಯ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಲು ಎರಡೂ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಕಾಳಜಿಯಿಂದ ಕೆಲಸ ಮಾಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಒಟ್ಟಾಗಿ ಶ್ರಮಿಸಿದ ಪರಿಣಾಮ ವಿ. ಸೋಮಣ್ಣ ಅವರು ಜಯಗಳಿಸಿ ಕೇಂದ್ರ ಸಚಿವರಾಗಿದ್ದಾರೆ. ಮೈತ್ರಿ ಪಕ್ಷಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಎಲ್ಲ ಚುನಾವಣೆಗಳಲ್ಲಿಯೂ ಗೆಲುವು ಸಾಧಿಸಬಹುದು ಎಂಬ ವಿಶ್ವಾಸ ಮೂಡಿದೆ ಎಂದರು.
ಆಗ್ನೇಯ ಪದವೀಧರರ ಕ್ಷೇತ್ರ ವ್ಯಾಪ್ತಿಯ 35 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಚಿವರೂ ಇದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದೆ. ಬಿಜೆಪಿ ಮತ್ತು ಜೆಡಿಎಸ್ನ ಆರು ಶಾಸಕರಿದ್ದರೂ ಪದವೀಧರ ಮತದಾರರು ಯಾವುದೇ ಆಮಿಷ ಅಥವಾ ಒತ್ತಡಕ್ಕೆ ಮಣಿಯದೆ ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಬೇಸತ್ತಿರುವ ರಾಜ್ಯದ ಜನರು ಈ ಸರ್ಕಾರವನ್ನು ಬದಲಾಯಿಸಲು ಚುನಾವಣೆಯನ್ನು ಕಾಯುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಟಿ.ಆರ್. ನಾಗರಾಜ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುತ್ತಿಲ್ಲ. ಬರ ಪರಿಸ್ಥಿತಿಯಲ್ಲಿ ರೈತರ ಸಂಕಷ್ಟಗಳಿಗೆ ಸಮರ್ಪಕವಾಗಿ ಸ್ಪಂದಿಸಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳದೆ, ಅನಗತ್ಯ ವಿಚಾರಗಳಲ್ಲಿ ಕಾಲಹರಣ ಮಾಡುತ್ತಾ ಕಾಂಗ್ರೆಸ್ ನಾಯಕರು ಜನರನ್ನು ದಿಕ್ಕುತಪ್ಪಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ಸರ್ಕಾರಕ್ಕೆ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಜೆಡಿಎಸ್ ನಗರ ಅಧ್ಯಕ್ಷ ಟಿ.ಎಚ್. ಜಯರಾಮ್ ಮಾತನಾಡಿ, ರಾಜ್ಯದ ನಾಲ್ಕೂ ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಯಲ್ಲಿ ಪ್ರಬುದ್ಧ ಮತದಾರರು ಎನ್ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯಲು ಎನ್ಡಿಎ ಸಮರ್ಥವಾಗಿದೆ ಎಂಬ ಸಂದೇಶವನ್ನು ಈ ಚುನಾವಣೆಯ ಫಲಿತಾಂಶ ರವಾನಿಸಿದೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ ಬಿಜೆಪಿ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜೆಡಿಎಸ್ ಹಿರಿಯ ಮುಖಂಡ ಟಿ.ಎಲ್. ಕುಂಭಯ್ಯ, ನಗರ ಕಾರ್ಯಾಧ್ಯಕ್ಷ ಮೋಹನ್ ಕುಮಾರ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಚ್. ಹನುಮಂತರಾಜು ಮತ್ತು ರಾಜಶೇಖರ್, ಉಪಾಧ್ಯಕ್ಷ ಎಚ್.ಎಂ. ರವೀಶಯ್ಯ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಚೈತ್ರ ಮಂಜುನಾಥ್, ನಗರ ಅಧ್ಯಕ್ಷ ಧನುಷ್, ಎರಡೂ ಪಕ್ಷಗಳ ಮುಖಂಡರಾದ ಸೋಲಾರ್ ಕೃಷ್ಣಮೂರ್ತಿ, ರುದ್ರೇಶ್, ಶ್ರೀನಿವಾಸ್ ಪ್ರಸಾದ್, ಟಿ.ಜಿ. ನರಸಿಂಹರಾಜು, ಭೈರಣ್ಣ, ಎಚ್.ಎಸ್. ವಿರೂಪಾಕ್ಷಪ್ಪ, ಲಕ್ಷ್ಮಮ್ಮ, ಕೆಂಪರಾಜು, ಭೈರೇಶ್, ವಿಜಯ್ ಗೌಡ, ಮನೋಹರ ಗೌಡ, ಪ್ರತಾಪ್, ಗಂಗೇಶ್, ಮೆಡಿಕಲ್ ಮಧು, ವೆಂಕಟೇಶ್, ಟಿ.ಸಿ. ಪ್ರಭಾಕರ್, ಯಶೋಧ, ತಿಪ್ಪೇಸ್ವಾಮಿ, ಗಣೇಶ್ ಸೇರಿದಂತೆ ವಿವಿಧ ಮೋರ್ಚಾ ಹಾಗೂ ಘಟಕಗಳ ಮುಖಂಡರು ಭಾಗವಹಿಸಿದ್ದರು.
