ಸ್ವಾಮೀಜಿ ವೃತ್ತ: ಶ್ರೀಗಳ ಗೌರವಕ್ಕೆ ಧಕ್ಕೆಯಾಗದಿರಲಿ: ಸೊಗಡು ಶಿವಣ್ಣ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಸ್ವಾಮೀಜಿ ವೃತ್ತ: ಶ್ರೀಗಳ ಗೌರವಕ್ಕೆ ಧಕ್ಕೆಯಾಗದಿರಲಿ: ಸೊಗಡು ಶಿವಣ್ಣ

Tumkurnews.in

ತುಮಕೂರು: ನಗರದ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಹೆಸರಿನ ವೃತ್ತದ ನಾಮಕರಣದ ಸಂದರ್ಭದಲ್ಲಿ ಸ್ವಾಮೀಜಿಯವರ ಗೌರವಕ್ಕೆ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ವೃತ್ತವನ್ನು ಅಭಿವೃದ್ಧಿಪಡಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಮಾಡಿದ್ದಾರೆ.

ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯ ಕಾರ್ಯದರ್ಶಿಯವರ ಕಚೇರಿಯಲ್ಲಿ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದ ಅವರು, ತುಮಕೂರು ನಗರದ ಹೃದಯಭಾಗದಲ್ಲಿರುವ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಹೆಸರಿನ ವೃತ್ತವು ಜಿಲ್ಲೆಯ ಜನರ ಭಕ್ತಿ, ಗೌರವ ಹಾಗೂ ಭಾವನಾತ್ಮಕ ಅಭಿಮಾನದ ಪ್ರತೀಕವಾಗಿದೆ. ಈ ವೃತ್ತವು ಪೂಜ್ಯ ಶ್ರೀಗಳ ಹೆಸರನ್ನು ಹೊಂದಿರುವುದು ತುಮಕೂರು ಜಿಲ್ಲೆಯ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ವೃತ್ತದ ಹೆಸರು ಬದಲಾವಣೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದ್ದು, ಅದಕ್ಕೆ ಅವಕಾಶ ನೀಡದೆ ಸ್ವಾಮೀಜಿಯವರ ಹೆಸರನ್ನು ಉಳಿಸಬೇಕು ಎಂದು ತಿಳಿಸಿದ್ದಾರೆ.

ಸದರಿ ವೃತ್ತವನ್ನು ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಈಗಾಗಲೇ ಇರುವ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಹೆಸರಿನ ನಾಮಕರಣಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಹಾಗೂ ಹೆಸರು ಬದಲಾವಣೆ ಅಥವಾ ತೆರವುಗೊಳಿಸುವ ಯಾವುದೇ ಕ್ರಮ ಕೈಗೊಳ್ಳದಂತೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ವಿನಂತಿಸಿದ್ದಾರೆ.

ವೃತ್ತದ ಸೌಂದರ್ಯೀಕರಣ, ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಹಾಗೂ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಾಗ ಪೂಜ್ಯ ಶ್ರೀಗಳ ಹೆಸರಿನ ಗೌರವ ಮತ್ತು ಅಸ್ತಿತ್ವವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು ಅಭಿವೃದ್ಧಿಪಡಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಬೇಕೆಂದು ಸೊಗಡು ಶಿವಣ್ಣ ಕೋರಿದ್ದಾರೆ.

Leave a Reply

Your email address will not be published. Required fields are marked *