ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಹೊರೆ: ಲೀಲಾವತಿ ಅಶೋಕ್ ಆಕ್ರೋಶ
Tumkurnews.in
ತುಮಕೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಹಾಲು, ಮೊಸರು, ವಿದ್ಯುತ್ ಹಾಗೂ ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸಿದೆ ಎಂದು ಜೆಡಿಎಸ್ ನಗರ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಲೀಲಾವತಿ ಅಶೋಕ್ ಆರೋಪಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಅವುಗಳ ನಿರ್ವಹಣೆಯಲ್ಲಿನ ವೈಫಲ್ಯದಿಂದ ಉಂಟಾದ ನಷ್ಟವನ್ನು ಜನರ ಮೇಲೆ ಬೆಲೆ ಏರಿಕೆಯ ರೂಪದಲ್ಲಿ ಹೊರಿಸುತ್ತಿದೆ. ಯಾವುದೇ ಮಹಿಳೆಯರು ಗ್ಯಾರಂಟಿ ಯೋಜನೆಗಳನ್ನು ಕೇಳಿರಲಿಲ್ಲ. ಚುನಾವಣೆಯಲ್ಲಿ ಮಹಿಳೆಯರನ್ನು ಆಕರ್ಷಿಸಲು ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಆಡಳಿತಾವಧಿಯಲ್ಲಿ ಹಾಲು, ವಿದ್ಯುತ್ ದರ, ನೀರಿನ ಸುಂಕ ಹಾಗೂ ನೋಂದಣಿ ಶುಲ್ಕ ಸೇರಿದಂತೆ ಹಲವು ಅಗತ್ಯ ಸೇವೆಗಳ ದರ ಏರಿಕೆಯಾಗಿದೆ. ನೂರಕ್ಕೂ ಹೆಚ್ಚು ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡದ ಜನವಿರೋಧಿ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಲೀಲಾವತಿ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
