ಬೆಲೆ ಏರಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುರೇಶ್‌ಗೌಡ ವಾಗ್ದಾಳಿ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ ರಾಜಕೀಯ

ಬೆಲೆ ಏರಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸುರೇಶ್‌ಗೌಡ ವಾಗ್ದಾಳಿ

29 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Tumkurnews.in

ತುಮಕೂರು: ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಸಾಮರ್ಥ್ಯ ಸೌಧದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್‌ಗೌಡ ಅವರು ಕ್ಷೇತ್ರದ 29 ಮಹಿಳಾ ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷಭೇದವಿಲ್ಲದೆ ಅರ್ಹ ಮಹಿಳಾ ಫಲಾನುಭವಿಗಳನ್ನು ಗುರುತಿಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ತಮ್ಮ ಕಾಲ ಮೇಲೆ ತಾವು ನಿಂತು ಜೀವನ ರೂಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿದೆ. ಪ್ರತಿ ಯಂತ್ರದ ಬೆಲೆ ಸುಮಾರು 18 ಸಾವಿರ ರೂ.ಗಳಾಗಿದ್ದು, ಉತ್ತಮ ಗುಣಮಟ್ಟದ ಯಂತ್ರಗಳನ್ನು ನೀಡಲಾಗಿದೆ ಎಂದರು.

ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಂಕಷ್ಟ

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ನೆಪದಲ್ಲಿ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ರಸ್ತೆಗಳಲ್ಲಿ ಗುಂಡಿ ಮುಚ್ಚಲು ಕೂಡ ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಲಿನ ಬೆಲೆ ಏರಿಕೆ ವಿಚಾರದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಾನು ತುಪ್ಪ ಖರೀದಿಸಲು ಹೋದಾಗ 650 ರೂ. ಇದ್ದ ಬೆಲೆ 850 ರೂ.ಗೆ ಏರಿಕೆಯಾಗಿತ್ತು. ದೀಪಾವಳಿ ಹಬ್ಬದ ದೀಪ ಹಚ್ಚುವುದಕ್ಕೂ ಕಷ್ಟವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದಂತಾಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆದರೆ ಕಾಂಗ್ರೆಸ್ ಪಕ್ಷಕ್ಕೆ ಜನ ತಕ್ಕ ಉತ್ತರ ನೀಡಲಿದ್ದಾರೆ. ಬರ ಪರಿಹಾರದ ಕುರಿತು ಪ್ರಶ್ನಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರದಲ್ಲಿ ಹಣವಿದ್ದರೆ ಮಾತ್ರ ಪರಿಹಾರ ನೀಡಲು ಸಾಧ್ಯ ಎಂಬ ಮಾತುಗಳು ಕೇಳಿಬರುತ್ತಿವೆ. ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿರುವಾಗ ರೈತರಿಗೆ ಬರ ಪರಿಹಾರ ಯಾವಾಗ ಸಿಗಲಿದೆ? ಜನರಿಗೆ ಭರವಸೆ ನೀಡುವುದನ್ನು ಬಿಟ್ಟು ಪರಿಹಾರ ಒದಗಿಸಬೇಕು ಎಂದು ಸುರೇಶ್‌ಗೌಡ ಟೀಕಿಸಿದರು.

ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ವತಿಯಿಂದ ಹೊಲಿಗೆ ಯಂತ್ರಗಳನ್ನು ವಿತರಿಸುವುದರೊಂದಿಗೆ ಫಲಾನುಭವಿಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ, ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವೆಂಕಟರಾಜು, ಸಹಾಯಕ ಅಭಿವೃದ್ಧಿ ಅಧಿಕಾರಿ ಸುಮಿತ್ರ ಕೆ.ಎಲ್., ಮುಖಂಡರಾದ ಗೂಳೂರು ಶಿವಕುಮಾರ್, ರಾಜಶೇಖರ್, ನರಸಿಂಹಮೂರ್ತಿ, ಗಂಗಣ್ಣ, ಆನಂದ್, ಶಶಾಂಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *