ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ನೆಹರು: ಚಂದ್ರಶೇಖರಗೌಡ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ ರಾಜ್ಯ

ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ನೆಹರು: ಚಂದ್ರಶೇಖರಗೌಡ

Tumkurnews.in

ತುಮಕೂರು: ಆಗರ್ಭ ಶ್ರೀಮಂತ ಮನೆತನದಲ್ಲಿ ಜನಿಸಿದರೂ, ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ, ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಪಂಡಿತ್ ಜವಾಹರಲಾಲ್ ನೆಹರು ಅವರು ದೇಶ ಕಂಡ ಅಪರೂಪದ ನಾಯಕರಲ್ಲಿ ಒಬ್ಬರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ. ಚಂದ್ರಶೇಖರಗೌಡ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ್ ಜವಾಹರಲಾಲ್ ನೆಹರು ಅವರ 137ನೇ ಜನ್ಮಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಅಪಾರ ಪಾಂಡಿತ್ಯ ಗಳಿಸಿದ್ದ ನೆಹರು ಅವರು, ಮಹಾತ್ಮ ಗಾಂಧೀಜಿ ಅವರ ಕರೆಯ ಮೇರೆಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದರು. ಸೈಮನ್ ಕಮಿಷನ್ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿ, ಲಾಠಿ ಏಟು ತಿಂದು ಜೈಲುವಾಸವನ್ನೂ ಅನುಭವಿಸಿದರು. ಜೈಲಿನಲ್ಲಿದ್ದಾಗ ತಮ್ಮ ಪುತ್ರಿ ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರಗಳ ಸಂಕಲನವಾದ ‘ಡಿಸ್ಕವರಿ ಆಫ್ ಇಂಡಿಯಾ’ ಇಂದಿಗೂ ಜನಪ್ರಿಯ ಕೃತಿಗಳಲ್ಲಿ ಒಂದಾಗಿದೆ.

ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಸಣ್ಣಪುಟ್ಟ ವಸ್ತುಗಳಿಗೂ ವಿದೇಶಗಳ ಮೇಲೆ ಅವಲಂಬಿತವಾಗಿದ್ದ ಭಾರತವನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತಂದರು. ಆ ಮೂಲಕ ದೇಶವನ್ನು ಹಂತ ಹಂತವಾಗಿ ಅಭಿವೃದ್ಧಿಯ ಪಥದತ್ತ ಕೊಂಡೊಯ್ದ ನೆಹರು ಅವರು ನವಭಾರತದ ನಿರ್ಮಾತೃಗಳಲ್ಲಿ ಒಬ್ಬರಾಗಿದ್ದಾರೆ ಎಂದರು.

ರಾಜ್ಯ ಸರ್ಕಾರವು ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಲಹೆಯಂತೆ ವಿವಿಧ ನಿಗಮ-ಮಂಡಳಿಗಳಿಗೆ ನಿರ್ದೇಶಕರನ್ನು ನೇಮಕ ಮಾಡಿದೆ. ಈ ಪಟ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಶಿಫಾರಸಿಗೆ ಅವಕಾಶ ನೀಡಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಪಟ್ಟಿಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ. ಒಂದು ವೇಳೆ ನನಗೆ ಅವಕಾಶ ದೊರೆತರೆ, ಪಕ್ಷಕ್ಕಾಗಿ ಹಗಲಿರುಳು ಶ್ರಮಿಸುವ, ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಹಾಗೂ ಸದಾ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ನಿಷ್ಠಾವಂತ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದು ಚಂದ್ರಶೇಖರಗೌಡ ಭರವಸೆ ನೀಡಿದರು.

ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದ ಸಂದರ್ಭದಲ್ಲಿ ದೇಶದ ಜನಸಂಖ್ಯೆ ಸುಮಾರು 33 ಕೋಟಿಯಷ್ಟಿತ್ತು. ಇಷ್ಟು ದೊಡ್ಡ ಜನಸಂಖ್ಯೆಗೆ ಆಹಾರ ಒದಗಿಸುವುದೇ ಸವಾಲಿನ ಕೆಲಸವಾಗಿತ್ತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿಯಾದ ನೆಹರು ಅವರು ಕೃಷಿ, ಕೈಗಾರಿಕೆ, ಹೈನುಗಾರಿಕೆ ಹಾಗೂ ವಿಜ್ಞಾನ ಕ್ಷೇತ್ರಗಳಿಗೆ ಆದ್ಯತೆ ನೀಡುವುದರ ಜತೆಗೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೂ ವಿಶೇಷ ಒತ್ತು ನೀಡಿದರು.

ಇದರ ಫಲವಾಗಿ ಐಐಎಸ್ಸಿ, ಏಮ್ಸ್, ಇಸ್ರೋ ಹಾಗೂ ಐಐಟಿಗಳಂತಹ ಪ್ರಮುಖ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಬೆಳವಣಿಗೆಗೆ ಭದ್ರ ಬುನಾದಿ ದೊರೆಯಿತು. ಇಂದು ಭಾರತದ ಪ್ರತಿಭಾವಂತರು ವಿಶ್ವದಾದ್ಯಂತ ಗುರುತಿಸಿಕೊಳ್ಳಲು ನೆಹರು ಅವರ ದೂರದೃಷ್ಟಿಯೂ ಪ್ರಮುಖ ಕಾರಣವಾಗಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ರಾಮಕೃಷ್ಣ ಮಾತನಾಡಿ, ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ನೆಹರು ಅವರ ಕೊಡುಗೆ ಅಪಾರ. ಆದರೆ, ಇಂದಿನ ಪ್ರಧಾನಮಂತ್ರಿಗಳು ನೆಹರು ಜಾರಿಗೆ ತಂದ ಯೋಜನೆಗಳ ಹೆಸರುಗಳನ್ನು ಬದಲಾಯಿಸಿ ಪ್ರಚಾರ ಪಡೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಸತತ 17 ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ದೇಶವನ್ನು ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಸಿದ ಕೀರ್ತಿ ನೆಹರು ಅವರಿಗೆ ಸಲ್ಲುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಷಣ್ಮುಗಪ್ಪ, ನಟರಾಜಶೆಟ್ಟಿ, ಪಿ. ಶಿವಾಜಿ, ಇರ್ಫಾನ್ ಅಹಮದ್, ಸುರೇಶ್ ರಾಜು ಹಾಗೂ ಲಿಂಗರಾಜು ಮಾತನಾಡಿದರು.

ಮುಖಂಡರಾದ ಸಂಜೀವ್ ಕುಮಾರ್, ವಕೀಲರಾದ ಕೆ.ಎನ್. ಹರೀಶ್, ಮಂಜುನಾಥ್, ಕೈದಾಳ ರಮೇಶ್, ಅತೀಕ್ ಅಹಮದ್, ಕೆಂಪಣ್ಣ, ಸೈಯದ್ ದಾದಾಪೀರ್, ಅಂಬರೀಷ್, ಶಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *