ನ. 21ರಂದು ಪಾಲಿಕೆ ಸಭಾಂಗಣದಲ್ಲಿ ಪ್ರಜಾಸೇವೆ ಅಭಿಯಾನ ಜನಸಭೆ
Tumkurnews.in
ತುಮಕೂರು: ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನವೆಂಬರ್ 21ರಂದು ಬೆಳಗ್ಗೆ 10 ಗಂಟೆಗೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರ ಅಧ್ಯಕ್ಷತೆಯಲ್ಲಿ ‘ಪ್ರಜಾಸೇವೆ ಅಭಿಯಾನ ಜನಸಭೆ’ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ.
ಗುಬ್ಬಿ ತಾಲ್ಲೂಕಿನ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆ: ಆಕ್ಷೇಪಣೆ ಸಲ್ಲಿಸಲು ಆಹ್ವಾನ
ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳ ಕೃಷಿ ಜಮೀನು, ನಿವೇಶನಗಳು ಹಾಗೂ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಿವೇಶನಗಳ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ತಾಲ್ಲೂಕು ಸಮಿತಿಯಲ್ಲಿ ಅನುಮೋದಿಸಲಾಗಿದೆ.
ಪರಿಷ್ಕೃತ ಮಾರ್ಗಸೂಚಿ ಬೆಲೆಗಳ ಕುರಿತು ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಗುಬ್ಬಿ ಉಪನೋಂದಣಿ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಗುಬ್ಬಿ ಉಪನೋಂದಣಾಧಿಕಾರಿಗಳು ತಿಳಿಸಿದ್ದಾರೆ.
ಪರಿಷ್ಕೃತ ಮಾರ್ಗಸೂಚಿ ಬೆಲೆಗಳ ಕರಡು ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಉಪನೋಂದಣಿ ಕಚೇರಿ, ಪಟ್ಟಣ ಪಂಚಾಯಿತಿ ಹಾಗೂ ತಾಲ್ಲೂಕು ಕಚೇರಿಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗುಬ್ಬಿ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 19 ಮತ್ತು 20ರಂದು ವಿದ್ಯುತ್ ವ್ಯತ್ಯಯ
ತುಮಕೂರು: ಬೆಸ್ಕಾಂನ ಶಿರಾ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ನವೆಂಬರ್ 19 ಮತ್ತು 20ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ನವೆಂಬರ್ 19ರಂದು: ಗೌಡಗೆರೆ, ಹೊಸೂರು, ಹುಣಸೆಹಳ್ಳಿ, ದ್ವಾರನಕುಂಟೆ, ಬೇವಿನಹಳ್ಳಿ, ಹುಲಿಕುಂಟೆ, ಮೇಲ್ಕುಂಟೆ, ನಾದೂರು, ಹೊಸಹಳ್ಳಿ, ಹೆಂದೊರೆ ಹಾಗೂ ಹಂದಿಕುಂಟೆ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನವೆಂಬರ್ 20ರಂದು: ಬರಗೂರು, ದೊಡ್ಡಬಾಣಗೆರೆ, ದ್ವಾರನಕುಂಟೆ, ತಡಕಲೂರು, ಹುಲಿಕುಂಟೆ, ಹಂದಿಕುಂಟೆ, ಶಿರಾ ನಗರ, ಭೂವನಹಳ್ಳಿ, ಗೌಡಗೆರೆ, ಬಂದಕುಂಟೆ ಹಾಗೂ ಲಕ್ಷ್ಮೀಸಾಗರ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಗ್ರಾಹಕರು ವಿದ್ಯುತ್ ವ್ಯತ್ಯಯದ ಅವಧಿಯಲ್ಲಿ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ತುಮಕೂರು: KMERC–CEPMIZ ಮೇಲ್ವಿಚಾರಣಾ ಪ್ರಾಧಿಕಾರದ ಸಲಹೆಗಾರ ಸಂಜಯ್ ಎಸ್. ಬಿಜ್ಜೂರ ಅವರು ನವೆಂಬರ್ 17 ಮತ್ತು 18ರಂದು ತುಮಕೂರು ಜಿಲ್ಲೆಯ ವಿವಿಧ ಗಣಿ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿ, ಅನುಷ್ಠಾನ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು.
ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಜಿಟಿಟಿಸಿ ವತಿಯಿಂದ ನಿರ್ಮಿಸಲಾಗಿರುವ ವಿದ್ಯಾರ್ಥಿಗಳ ಹಾಸ್ಟೆಲ್ ಹಾಗೂ ಕಾರ್ಯಾಗಾರ, ತುಮಕೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಗುಬ್ಬಿ ಮತ್ತು ನಿಟ್ಟೂರಿನಲ್ಲಿ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕಟ್ಟಡಗಳನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಗುಬ್ಬಿ ಮತ್ತು ತಿಪಟೂರು ತಾಲ್ಲೂಕುಗಳಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಕಾಮಗಾರಿಗಳ ಪ್ರಗತಿಯನ್ನೂ ವೀಕ್ಷಿಸಿದರು.
ಅರಣ್ಯ ಇಲಾಖೆಯ ವತಿಯಿಂದ ತರಬೇನಹಳ್ಳಿ ಗ್ರಾಮದಲ್ಲಿ ಕೈಗೊಳ್ಳಲಾಗಿರುವ ಪ್ಲಾಂಟೇಶನ್ ಕಾಮಗಾರಿ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಬೈಲಪ್ಪನ ಮಠ ಹಾಗೂ ಮುದ್ದೇನಹಳ್ಳಿ ರಸ್ತೆ ಕಾಮಗಾರಿ ಮತ್ತು ಲೋಕೋಪಯೋಗಿ ಇಲಾಖೆಯ ವತಿಯಿಂದ ಕೈಗೊಳ್ಳಲಾಗಿರುವ ಕೈಮರ–ಬೆಳ್ಳಾರ ರಸ್ತೆ ಕಾಮಗಾರಿಗಳನ್ನೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಸ್ತೆ ಬಿರುಕು ಬಿಟ್ಟಿರುವ ಕುರಿತು ಸ್ಥಳೀಯ ಗ್ರಾಮಸ್ಥರು ಸಲಹೆಗಾರರ ಗಮನಕ್ಕೆ ತಂದರು. ಈ ಕುರಿತು ಮೂರನೇ ವ್ಯಕ್ತಿಯಿಂದ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಗ್ರಾಮಸ್ಥರಿಗೆ ತಿಳಿಸಿದರು.
ಕ್ಷೇತ್ರ ಭೇಟಿ ಸಂದರ್ಭದಲ್ಲಿ ವಿವಿಧ ಕಾಮಗಾರಿಗಳ ಗುಣಮಟ್ಟ, ಪ್ರಗತಿ, ಅನುಷ್ಠಾನದ ಹಂತ ಹಾಗೂ ಮಾಹಿತಿ ಫಲಕಗಳ ಅಳವಡಿಕೆ ಕುರಿತು ಪರಿಶೀಲನೆ ನಡೆಸಿದರು. ಅಲ್ಲದೆ, ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅನುಷ್ಠಾನ ಇಲಾಖೆಗಳ ತಾಂತ್ರಿಕ ಅಧಿಕಾರಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಕಾಮಗಾರಿಗಳ ಅನುಷ್ಠಾನದಲ್ಲಿ ಎದುರಾಗುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ತಕ್ಷಣವೇ ಗಮನಕ್ಕೆ ತಂದು ಪರಿಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಅರಣ್ಯ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಹಿರೇಹಳ್ಳಿ ಜಿಟಿಟಿಸಿ ಪ್ರಾಂಶುಪಾಲರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
