Tumkurnews.in
ತುಮಕೂರು: ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೆದ್ದಾರಿ ತಡೆಗೆ ಮುಂದಾಗಿದ್ದ ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ಕೂಡಲೇ ಬಂಧಿತ ರೈತರನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ. ಗೋವಿಂದರಾಜು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ. ಶಂಕರಪ್ಪ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಕಬ್ಬು ಬೆಳೆಗಾರರು ಕಬ್ಬಿನ ದರ ಹೆಚ್ಚಳಕ್ಕೆ ಒತ್ತಾಯಿಸಿ ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ, ಧರಣಿ ಹಾಗೂ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲಾಡಳಿತವು ಕಬ್ಬು ಅರೆಯುವ ಕಾರ್ಖಾನೆಗಳ ಮಾಲೀಕರೊಂದಿಗೆ ಮಾತುಕತೆ ನಡೆಸಿ ಪ್ರತಿ ಟನ್ ಕಬ್ಬಿಗೆ 3,900 ರೂ. ದರ ನಿಗದಿಪಡಿಸಿದೆ. ಆದರೆ, ಬೀದರ್ ಜಿಲ್ಲಾಡಳಿತವು ಪ್ರತಿ ಟನ್ ಕಬ್ಬಿಗೆ ಕೇವಲ 3,600 ರೂ. ದರ ನಿಗದಿಪಡಿಸಿದೆ. ಈ ತಾರತಮ್ಯವನ್ನು ಖಂಡಿಸಿ, ಪ್ರತಿ ಟನ್ ಕಬ್ಬಿಗೆ 4,000 ರೂ. ದರ ನಿಗದಿಪಡಿಸಬೇಕೆಂದು ಒತ್ತಾಯಿಸಿ ಬೀದರ್ ಜಿಲ್ಲೆಯ ಕಬ್ಬು ಬೆಳೆಗಾರರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಕಳೆದ ಒಂದು ವಾರದಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಗುರುವಾರ ಹೆದ್ದಾರಿ ತಡೆಗೆ ಮುಂದಾಗಿದ್ದರು ಎಂದು ಹೇಳಿದ್ದಾರೆ.
ಹೆದ್ದಾರಿ ತಡೆ ನಡೆಸುವ ಕುರಿತು ರೈತರು ಬೀದರ್ ಜಿಲ್ಲಾಡಳಿತಕ್ಕೆ ಮುಂಚಿತವಾಗಿಯೇ ಮಾಹಿತಿ ನೀಡಿದ್ದರು. ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗಿದ್ದರು. ಆದರೆ, ಮುಂಜಾಗ್ರತಾ ಕ್ರಮದ ಹೆಸರಿನಲ್ಲಿ ರೈತರು ಹಾಗೂ ರೈತ ಮುಖಂಡರನ್ನು ಬಂಧಿಸಿರುವ ಬೀದರ್ ಜಿಲ್ಲಾಡಳಿತದ ಕ್ರಮವು ಕಬ್ಬು ಬೆಳೆಗಾರರ ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡಬೇಕಾದ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರೈತರ ಹೋರಾಟದ ಬಗ್ಗೆ ತಿಳಿದಿದ್ದರೂ ಸಮರ್ಪಕವಾಗಿ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೂಡಲೇ ಕಬ್ಬು ಬೆಳೆಗಾರರೊಂದಿಗೆ ಮಾತುಕತೆ ನಡೆಸಿ ನ್ಯಾಯಯುತ ದರ ನಿಗದಿಪಡಿಸಬೇಕು. ಕಬ್ಬಿನ ದರ ನಿಗದಿಯಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ತಾರತಮ್ಯ ಮಾಡಬಾರದು. ಬಂಧಿತ ರೈತರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಒಂದು ವೇಳೆ ಬಂಧಿತ ರೈತರನ್ನು ಬಿಡುಗಡೆ ಮಾಡದಿದ್ದರೆ ಹಾಗೂ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿಪಡಿಸದಿದ್ದರೆ, ಈ ಹೋರಾಟವನ್ನು ಕಬ್ಬು ಬೆಳೆಯುವ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಎ. ಗೋವಿಂದರಾಜು ಮತ್ತು ಸಿ.ಜಿ. ಶಂಕರಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
