ದೇವರಾಯಪಟ್ಟಣ ಕಾಲೋನಿ–ಬಂಡೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ದೇವರಾಯಪಟ್ಟಣ ಕಾಲೋನಿ–ಬಂಡೆ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ

Tumkurnews.in

ತುಮಕೂರು: ನಗರದ ಹೊರವಲಯದ ದೇವರಾಯಪಟ್ಟಣ ಕಾಲೋನಿ ಹಾಗೂ ದೇವರಾಯಪಟ್ಟಣ ಬಂಡೆ ಪ್ರದೇಶದಲ್ಲಿ ಕಳೆದ 40 ವರ್ಷಗಳಿಂದ ವಾಸವಾಗಿರುವ 40ಕ್ಕೂ ಅಧಿಕ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಟೌನ್‌ಹಾಲ್ ವೃತ್ತದಲ್ಲಿರುವ ಶಾಸಕರ ಕಚೇರಿಗೆ ದೇವರಾಯಪಟ್ಟಣ ಕಾಲೋನಿ ಹಾಗೂ ಬಂಡೆ ಪ್ರದೇಶದ ಮಹಿಳೆಯರು, ವೃದ್ಧರು ಸೇರಿದಂತೆ 40ಕ್ಕೂ ಅಧಿಕ ಕುಟುಂಬಗಳ ನಿವಾಸಿಗಳು ಭೇಟಿ ನೀಡಿ, ನಿವೇಶನದ ಹಕ್ಕುಪತ್ರ ವಿತರಿಸುವಂತೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು, ಕಳೆದ 40 ವರ್ಷಗಳಿಂದ ಈ ಪ್ರದೇಶಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ಅಗತ್ಯ ಹಕ್ಕುಪತ್ರಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಶಾಸಕರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ, ಕೂಡಲೇ ದೇವರಾಯಪಟ್ಟಣ ಕಾಲೋನಿ ಹಾಗೂ ಬಂಡೆ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿ ವಾಸವಾಗಿರುವ ಕುಟುಂಬಗಳ ಸಮೀಕ್ಷೆ ನಡೆಸುವಂತೆ ಸೂಚಿಸಿದರು. ಅಲ್ಲದೆ, ಕುಟುಂಬಗಳಿಂದ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಸಂಗ್ರಹಿಸಿ, ಅರ್ಹ ಫಲಾನುಭವಿಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಕಳೆದ ನಾಲ್ಕು ದಶಕಗಳಿಂದ ಈ ಪ್ರದೇಶದಲ್ಲಿ 40ಕ್ಕೂ ಅಧಿಕ ಕುಟುಂಬಗಳು ವಾಸವಾಗಿದ್ದರೂ ಇದುವರೆಗೆ ಸರ್ಕಾರದಿಂದ ಯಾವುದೇ ಹಕ್ಕುಪತ್ರ ದೊರೆತಿಲ್ಲ. ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅಗತ್ಯ ದಾಖಲೆಗಳನ್ನು ಪಡೆದು ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಬಂದಾಗ ನಿವಾಸಿಗಳು ತಮ್ಮಲ್ಲಿರುವ ಅಗತ್ಯ ದಾಖಲೆಗಳನ್ನು ಒದಗಿಸಿ, ಸಮೀಕ್ಷೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಮುನಿಯಪ್ಪ ಸೇರಿದಂತೆ ದೇವರಾಯಪಟ್ಟಣ ಕಾಲೋನಿ ಹಾಗೂ ಬಂಡೆ ಪ್ರದೇಶದ ನಿವಾಸಿಗಳು ಉಪಸ್ಥಿತರಿದ್ದು, ಹಕ್ಕುಪತ್ರ ವಿತರಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

Leave a Reply

Your email address will not be published. Required fields are marked *