ಬಸವಣ್ಣನವರ ಅವಹೇಳನ ಆರೋಪ: ಲೇಖಕ ಮತ್ತು ಪ್ರಕಾಶಕರ ವಿರುದ್ಧ ಕ್ರಮಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಆಗ್ರಹ
Tumkurnews.in
ತುಮಕೂರು: ತುಮಕೂರಿನಲ್ಲಿ ಬಸವಣ್ಣನವರ ಕುರಿತು ಅವಹೇಳನಕಾರಿ ಲೇಖನ ಪ್ರಕಟಿಸಿರುವ ಆರೋಪದ ಹಿನ್ನೆಲೆಯಲ್ಲಿ ‘ಬಸವ ಮಂಟಪ’ ಪುಸ್ತಕದ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿ, ಇಬ್ಬರನ್ನೂ ಬಂಧಿಸಬೇಕು ಮತ್ತು ವಿವಾದಿತ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತುಮಕೂರು ಜಿಲ್ಲಾಧ್ಯಕ್ಷ ಡಾ. ಎಸ್. ಪರಮೇಶ್ವರ್ ಆಗ್ರಹಿಸಿದ್ದಾರೆ.
ಈ ಸಂಬಂಧ ಶುಕ್ರವಾರ ತುಮಕೂರು ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಮಹಾಸಭಾ ಮುಖಂಡರು, ಬಸವಣ್ಣನವರಂತಹ ಮಹಾನ್ ಮಾನವತಾವಾದಿ ಮತ್ತು ಸಮಾಜ ಸುಧಾರಕರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಿರುವುದು ಸಮಾಜದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.
‘ಬಸವ ಮಂಟಪ’ ಕೃತಿಯಲ್ಲಿ ಬಸವಣ್ಣನವರ ಕುರಿತು ಕೀಳುಮಟ್ಟದ ಹಾಗೂ ಅವಹೇಳನಕಾರಿ ರೀತಿಯಲ್ಲಿ ಬರೆಯಲಾಗಿದೆ. ಯಾವುದೇ ಮಹಾನ್ ದಾರ್ಶನಿಕರ ಕುರಿತು ಇಂತಹ ಬರಹಗಳನ್ನು ಪ್ರಕಟಿಸುವುದು ಖಂಡನೀಯ. ಇದು ಕೇವಲ ವೀರಶೈವ ಲಿಂಗಾಯತ ಸಮಾಜಕ್ಕೆ ಮಾತ್ರವಲ್ಲದೆ ಇಡೀ ಸಮಾಜಕ್ಕೆ ನೋವುಂಟು ಮಾಡಿದೆ ಎಂದು ಡಾ. ಎಸ್. ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ದೂರು ಸಲ್ಲಿಕೆ:
ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಾದಿತ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಲೇಖಕ ಮತ್ತು ಪ್ರಕಾಶಕರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂಬ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಹಾಸಭಾ ಮುಖಂಡರು ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿಯೂ ಪೊಲೀಸ್ ಠಾಣೆಗಳಿಗೆ ದೂರು ಸಲ್ಲಿಸಲಾಗಿದೆ. ಅದರಂತೆ ತುಮಕೂರಿನಲ್ಲಿಯೂ ಸಮಾಜದ ಹಿರಿಯರ ಸಮ್ಮುಖದಲ್ಲಿ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ಅವರ ಭಾವಚಿತ್ರ ಇರಿಸುವಂತೆ ಆದೇಶಿಸಿದೆ. ಬಸವ ಜಯಂತಿಯನ್ನು ಆಚರಿಸುವ ಮೂಲಕ ಸರ್ಕಾರ ಬಸವಣ್ಣನವರಿಗೆ ಗೌರವ ಸಲ್ಲಿಸುತ್ತಿದೆ. ಇಂತಹ ಸಂದರ್ಭದಲ್ಲಿ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಆದ್ದರಿಂದ ಪೊಲೀಸರು ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಮುಖಂಡರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಾಸಭಾದ ನಗರ ಪ್ರಧಾನ ಕಾರ್ಯದರ್ಶಿ ಸತ್ಯಮಂಗಲ ಜಗದೀಶ್, ತುಮಕೂರು ತಾಲ್ಲೂಕು ಅಧ್ಯಕ್ಷ ಜಯಣ್ಣ, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಾ. ಸದಾಶಿವಯ್ಯ, ಖಜಾಂಚಿ ಡಿ. ರಾಜಶೇಖರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಮಹಾಸಭಾ ಮುಖಂಡರು ನವೆಂಬರ್ 20ರಂದು ಪೊಲೀಸ್ ಅಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ, ಪುಸ್ತಕದಲ್ಲಿನ ಬರಹಗಳು ಬಸವ ಭಕ್ತರು ಹಾಗೂ ವೀರಶೈವ ಲಿಂಗಾಯತ ಸಮುದಾಯದ ಭಾವನೆಗಳಿಗೆ ತೀವ್ರ ನೋವುಂಟು ಮಾಡಿವೆ ಎಂದು ಆರೋಪಿಸಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
