ಅರ್ಥಪೂರ್ಣ ಕನಕದಾಸರ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಅರ್ಥಪೂರ್ಣ ಕನಕದಾಸರ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ಸೂಚನೆ

Tumkurnews.in

ತುಮಕೂರು: ತುಮಕೂರು ಜಿಲ್ಲಾಡಳಿತದ ವತಿಯಿಂದ ನವೆಂಬರ್ 27ರಂದು ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಂತಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿಯಂದು ಬೆಳಿಗ್ಗೆ 9 ಗಂಟೆಗೆ ಶಿರಾಗೇಟ್‌ನ ಕನಕವೃತ್ತದಿಂದ ಕನಕದಾಸರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿರಿಸಿ, ಕಲಾತಂಡಗಳೊಂದಿಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಮೆರವಣಿಗೆ ನಡೆಸಬೇಕು ಎಂದು ತಿಳಿಸಿದರು. ಮೆರವಣಿಗೆ ಸಾಗುವ ಮಾರ್ಗದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು. ಕನಕದಾಸರ ಜೀವನ, ಸಾಹಿತ್ಯ ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದರು. ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿರುವ ಎಲ್‌ಇಡಿ ಫಲಕದಲ್ಲಿ ಕನಕದಾಸರ ಕುರಿತು ವಿಶೇಷ ಪ್ರದರ್ಶನ ಏರ್ಪಡಿಸಲು ಸೂಚಿಸಿದರು.

ಕನಕದಾಸರ ಜಯಂತಿಯ ಅಂಗವಾಗಿ ನಗರದ 10 ಮಂದಿ ಹಾಗೂ ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ಒಬ್ಬರಂತೆ ಒಟ್ಟು 20 ಸಾಧಕರನ್ನು ಆಯ್ಕೆ ಮಾಡಿ ಸನ್ಮಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಮತ್ತು ಯಶಸ್ವಿಯಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್‌ಚಂದ್ರ, ಪತ್ರಕರ್ತ ನಾಗಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *