ತುಮಕೂರಿನಲ್ಲಿ ಹಕ್ಕುಪತ್ರ ವಂಚಿತರಿಗೆ ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ: ಶಾಸಕ ಜಿ.ಬಿ. ಜ್ಯೋತಿಗಣೇಶ್
Tumkurnews.in
ತುಮಕೂರು: ತುಮಕೂರು ನಗರದಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿದ್ದರೂ ಹಕ್ಕುಪತ್ರ ಸಿಗದೆ ತೊಂದರೆ ಅನುಭವಿಸುತ್ತಿರುವ ಅರ್ಹ ಫಲಾನುಭವಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದ್ದಾರೆ.
ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಕ್ಕುಪತ್ರ ವಿತರಣೆ ಪ್ರಕ್ರಿಯೆ ಹಲವು ದಿನಗಳಿಂದ ನಡೆಯುತ್ತಿದೆ. ಹಕ್ಕುಪತ್ರ ಇಲ್ಲದ ಕಾರಣ ಬಡ ಕುಟುಂಬಗಳಿಗೆ ಮನೆ ನಿರ್ಮಿಸಲು ಸಾಲ ಪಡೆಯುವುದು, ಆಸ್ತಿ ಖಾತೆ ಮಾಡಿಸುವುದು ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ತೊಂದರೆಯಾಗುತ್ತಿದೆ ಎಂದು ಹೇಳಿದರು.
ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವವರು ಹಾಗೂ ಖಾಸಗಿ ಜಾಗದಲ್ಲಿ ಹಲವು ವರ್ಷಗಳಿಂದ ನೆಲೆಸಿರುವವರ ಸಮಸ್ಯೆಗಳನ್ನು ಪ್ರತ್ಯೇಕವಾಗಿ ಪರಿಶೀಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವವರ ಬಗ್ಗೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಆದಷ್ಟು ಬೇಗ ಹಕ್ಕುಪತ್ರ ನೀಡಲಾಗುವುದು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.
ತುಮಕೂರಿನ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ವಸತಿ ಸೌಲಭ್ಯ ಮತ್ತು ಹಕ್ಕುಪತ್ರ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮುಖ್ಯವಾಗಿ ಬಡ್ಡಿಹಳ್ಳಿ ಕೆರೆಯ ಬಫರ್ ಪ್ರದೇಶ, ದೇವರಾಯಪಟ್ಟಣ, ಮೇಲುಕೋಟೆ, ಹೊನ್ನೇನಹಳ್ಳಿ, ಅಂತರಸನಹಳ್ಳಿ ಕಾಲೋನಿ, ಎಲ್ಲಾರೆ ಬಂಡೆ, ಗಂಗಸಂದ್ರ ಕೆರೆ ಸಮೀಪ, ಗೆದ್ದಲಹಳ್ಳಿ, ಭಾರತಿನಗರ ಕೆರೆ ಬಫರ್ ಪ್ರದೇಶ ಹಾಗೂ ಕ್ಯಾತ್ಸಂದ್ರ ಹಳೆಕೋಟೆ ರಿಂಗ್ ರಸ್ತೆ ಸಮೀಪ ವಾಸಿಸುತ್ತಿರುವವರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ಅಲ್ಲದೆ, ವಾರ್ಡ್ ಸಂಖ್ಯೆ 33ರ ಕ್ಯಾತ್ಸಂದ್ರದ ರಂಗಯ್ಯನಪಾಳ್ಯದಲ್ಲಿ ಸುಮಾರು 50ರಿಂದ 60 ಕಂದಾಯ ನಿವೇಶನಗಳಿಗೆ ಇ-ಆಸ್ತಿ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ತಿಳಿಸಿದರು.
ಸಭೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭಾ, ತಾಲೂಕು ಉಪತಹಶೀಲ್ದಾರ್, ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.
