ನ. 27ರಂದು ಸಂತಶ್ರೇಷ್ಠ ಕನಕದಾಸರ 539ನೇ ಜಯಂತಿ ಆಚರಣೆ
Tumkurnews.in
ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಕಾಳಿದಾಸ ವಿದ್ಯಾವರ್ಧಕ ಸಂಘ ಹಾಗೂ ಕುರುಬರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 27ರಂದು ಸಂತಶ್ರೇಷ್ಠ ಕನಕದಾಸರ 539ನೇ ಜಯಂತಿಯನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಶಿರಾಗೇಟ್ ಕನಕ ವೃತ್ತದಿಂದ ಸಂತಶ್ರೇಷ್ಠ ಕನಕದಾಸರ ಭಾವಚಿತ್ರವನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಜನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯು ಬಿ.ಜಿ.ಎಸ್. ವೃತ್ತ, ಎಂ.ಜಿ. ರಸ್ತೆ ಹಾಗೂ ಅಶೋಕ ರಸ್ತೆಯ ಮಾರ್ಗವಾಗಿ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರವನ್ನು ತಲುಪಲಿದೆ.
ನಂತರ ಬೆಳಿಗ್ಗೆ 11.45 ಗಂಟೆಗೆ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಡಿ.ಎಂ. ಪಾಳ್ಯದ ಶ್ರೀ ಗುರುಸಿದ್ಧೇಶ್ವರ ಮಠದ ಪೀಠಾಧಿಪತಿ ಶ್ರೀ ಶ್ರೀ ಬಿಂದುಶೇಖರ ಒಡೆಯರ್ ಮಹಾಸ್ವಾಮಿಗಳು ಆಶೀರ್ವಚನ ನೀಡಲಿದ್ದಾರೆ. ಶಾಸಕ ಜಿ.ಬಿ. ಜ್ಯೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಬೆಂಗಳೂರಿನ ವಿಜಯ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಸ್.ಎಲ್. ಮಂಜುನಾಥ್ ಅವರು ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕುರುಬ ಸಮುದಾಯದ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ 20 ಮಂದಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕೆ. ಮಿರ್ಜಿ ಮನವಿ ಮಾಡಿದ್ದಾರೆ.
