ರಕ್ತದಾನ ಶಿಬಿರ: ರಕ್ತದಾನಿಗಳಿಗೆ ಗೌರವ ಸಮರ್ಪಣೆ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ರಕ್ತದಾನ ಶಿಬಿರ: ರಕ್ತದಾನಿಗಳಿಗೆ ಗೌರವ ಸಮರ್ಪಣೆ

ಒಂದು ಯೂನಿಟ್ ರಕ್ತದಿಂದ ಮೂರು ಜೀವಗಳನ್ನು ಉಳಿಸಬಹುದು: ಆರೋಗ್ಯಾಧಿಕಾರಿಗಳ ಅಭಿಮತ

Tumkurnews.in

ತುಮಕೂರು: ರಕ್ತದಾನ ದಿನಾಚರಣೆಯ ಅಂಗವಾಗಿ ವಿವಿಧ ಇಲಾಖೆಗಳು ಹಾಗೂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಬುಧವಾರ ನಗರದ ಡಿಎಚ್‌ಒ ಕಚೇರಿ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲೋಕೇಶ್ ಧನಪಾಲ್ ಹಾವಳೆ ಅವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ಹಲವು ಬಾರಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ ಮಹಾದಾನಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರೆಡ್‌ಕ್ರಾಸ್, ರೋಟರಿ ಸಂಸ್ಥೆಗಳು, ಇನ್ನರ್ ವೀಲ್ ಸಂಸ್ಥೆಗಳು ಹಾಗೂ ಜಿಲ್ಲೆಯ ವಿವಿಧ ರಕ್ತನಿಧಿ ಕೇಂದ್ರಗಳ ಸಹಕಾರದೊಂದಿಗೆ ಶಿಬಿರವನ್ನು ಆಯೋಜಿಸಲಾಗಿತ್ತು.

ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಮಹಾದಾನಿಗಳು ಹಾಗೂ ವಿವಿಧ ಸೇವಾ ಸಂಸ್ಥೆಗಳ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಬಿ.ಎಂ. ಅವರು, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಅದನ್ನು ದಾನಿಗಳಿಂದಲೇ ಪಡೆಯಬೇಕಾಗಿದೆ. ರಕ್ತದಾನವು ಶ್ರೇಷ್ಠ ದಾನವಾಗಿದ್ದು, 18 ವರ್ಷ ಮೇಲ್ಪಟ್ಟವರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬಹುದು. ಹೆರಿಗೆ, ಅಪಘಾತ, ಶಸ್ತ್ರಚಿಕಿತ್ಸೆ ಹಾಗೂ ಕ್ಯಾನ್ಸರ್ ಚಿಕಿತ್ಸೆಯಂತಹ ಸಂದರ್ಭಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಿರುತ್ತದೆ. ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಾಗದಂತೆ ಮುಂಚಿತವಾಗಿ ರಕ್ತ ಸಂಗ್ರಹಿಸುವುದು ಅಗತ್ಯವಾಗಿದೆ. ಸೇವಾ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕನಿಷ್ಠ ತಿಂಗಳಿಗೊಮ್ಮೆ ರಕ್ತದಾನ ಶಿಬಿರಗಳನ್ನು ಆಯೋಜಿಸಿ ರೋಗಿಗಳು ಹಾಗೂ ಅಪಘಾತಕ್ಕೀಡಾದವರ ಜೀವ ಉಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಪ್ರತಿದಿನ ಸುಮಾರು 3,000 ಯೂನಿಟ್ ರಕ್ತದ ಅವಶ್ಯಕತೆಯಿದ್ದು, ಪ್ರಸ್ತುತ ಸುಮಾರು 2,000 ಯೂನಿಟ್ ರಕ್ತ ಮಾತ್ರ ಸಂಗ್ರಹವಾಗುತ್ತಿದೆ. ಇದರಿಂದ ಸುಮಾರು 1,000 ಯೂನಿಟ್ ರಕ್ತದ ಕೊರತೆಯಿದೆ. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಇಂತಹ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. 18ರಿಂದ 65 ವರ್ಷದೊಳಗಿನ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಸೂಕ್ತ ಆರೋಗ್ಯ ತಪಾಸಣೆಯೊಂದಿಗೆ ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ಯಾವುದೇ ತೊಂದರೆ ಅಥವಾ ಹಾನಿಯಾಗುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಅಮೀನಾ ಅಸ್ಮಾ ಮಾತನಾಡಿ, ಒಬ್ಬ ವ್ಯಕ್ತಿ ನೀಡುವ ಒಂದು ಯೂನಿಟ್ ರಕ್ತದಿಂದ ಸುಮಾರು ಮೂರು ಜೀವಗಳನ್ನು ಉಳಿಸಬಹುದು. ರಕ್ತದಾನದಂತಹ ಮಾನವೀಯ ಸೇವೆಯಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳಬೇಕು. ಅಮೂಲ್ಯವಾದ ಜೀವಗಳನ್ನು ಉಳಿಸುವ ಪುಣ್ಯದ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಬೆಳ್ಳಿ ಬ್ಲಡ್ ಬ್ಯಾಂಕ್‌ನ ಬೆಳ್ಳಿ ಲೋಕೇಶ್ ಮಾತನಾಡಿ, ಹೆರಿಗೆ, ಅಪಘಾತ, ಶಸ್ತ್ರಚಿಕಿತ್ಸೆ ಹಾಗೂ ಕ್ಯಾನ್ಸರ್ ಚಿಕಿತ್ಸೆಯ ಸಂದರ್ಭಗಳಲ್ಲಿ ನಿರಂತರವಾಗಿ ರಕ್ತದ ಅವಶ್ಯಕತೆ ಇರುತ್ತದೆ. ತುರ್ತು ಸಂದರ್ಭಗಳಲ್ಲಿ ರಕ್ತದ ಕೊರತೆಯಾಗದಂತೆ ಮುಂಚಿತವಾಗಿ ರಕ್ತ ಸಂಗ್ರಹಿಸುವುದು ಅತ್ಯಗತ್ಯ. ರೋಟರಿ ಮತ್ತು ಇನ್ನರ್ ವೀಲ್‌ನಂತಹ ಸೇವಾ ಸಂಸ್ಥೆಗಳು ನಿಯಮಿತವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹಣೆಗೆ ಸಹಕರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಟಿಎಚ್‌ಎಸ್ ಆಸ್ಪತ್ರೆಯ ಡಾ. ಸುರೇಶ್ ಬಾಬು, ರೋಟರಿ ಜಿಲ್ಲಾ ಗವರ್ನರ್ ಪ್ರಮೀಳಾ ಶಿವಕುಮಾರ್, ವಿವಿಧ ರೋಟರಿ ಹಾಗೂ ಇನ್ನರ್ ವೀಲ್ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳಾದ ಕೃಷ್ಣಕುಮಾರ್, ಭಾಗ್ಯಲಕ್ಷ್ಮಿ ನಾಗರಾಜ್, ರೇಖಾ ಶಿವಕುಮಾರ್, ಲತಾ ಪರಮೇಶ್, ಕಿಶೋರ್, ಸಿ. ನಾಗರಾಜ್, ಪ್ರದೀಪ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *