ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

Tumkurnews.in

ತುಮಕೂರು: ಕೊರಟಗೆರೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ವಿಕಲಚೇತನ ಫಲಾನುಭವಿಗಳಿಗೆ 2025-26ನೇ ಸಾಲಿನ ಅನಿರ್ಬಂಧಿತ ಯೋಜನೆಯ ಶೇ.5ರ ಅನುದಾನದಡಿ ಉಪಮುಖ್ಯಮಂತ್ರಿಗಳು, ಕಂದಾಯ ಹಾಗೂ ಕ್ರೀಡಾ ಸಚಿವರು, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಜಿ. ಪರಮೇಶ್ವರ ಅವರು ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಕೊರಟಗೆರೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ‘ಪ್ರಜಾ ಸೇವೆ ಅಭಿಯಾನ’ ಕಾರ್ಯಕ್ರಮದಲ್ಲಿ ವಿವಿಧ ವೈಯಕ್ತಿಕ ಸವಲತ್ತುಗಳನ್ನು ವಿತರಿಸಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿಕಲಚೇತನರು ಸ್ವಾವಲಂಬಿ ಜೀವನ ನಡೆಸುವಂತೆ ಸಲಹೆ ನೀಡಿದರು.

ಕೊರಟಗೆರೆ ತಾಲ್ಲೂಕು ಪಂಚಾಯಿತಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಒಟ್ಟು 1,312 ಫಲಾನುಭವಿಗಳಿಗೆ 1.21 ಕೋಟಿ ರೂ. ವೆಚ್ಚದ ವಿವಿಧ ಸವಲತ್ತುಗಳನ್ನು ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಕಾರ್ಯಾದೇಶಗಳ ವಿತರಣೆ, ಹೊಸ ಜಾಬ್ ಕಾರ್ಡ್‌ಗಳ ವಿತರಣೆ, ಹರ್ ಘರ್ ಜಲ್ ಘೋಷಣಾ ಪತ್ರ ಹಾಗೂ ಪಿಂಚಣಿ ಕಾರ್ಯಾದೇಶಗಳನ್ನು ವಿತರಿಸಲಾಯಿತು. ಅಲ್ಲದೆ, ವಿವಿಧ ಇಲಾಖೆಗಳ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಾಯಿತು.

ರೇಷ್ಮೆ ಇಲಾಖೆ ವತಿಯಿಂದ ಸಿಲ್ಕ್ ಸಮಗ್ರ ಯೋಜನೆಯಡಿ ಪ್ರತ್ಯೇಕ ರೇಷ್ಮೆ ಹುಳು ಸಾಕಾಣಿಕೆ ಮನೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಯಿತು. ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೆಂಗಿನಕಾಯಿ ಶೇಖರಣಾ ಘಟಕ ನಿರ್ಮಾಣಕ್ಕೆ ಸಹಾಯಧನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜಾ ಬಿ.ವಿ., ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೆ.ಪಿ. ಸಂಜೀವಪ್ಪ, ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಿ. ಅನಂತರಾಮು, ತಹಶೀಲ್ದಾರ್ ಶರತ್ಕುಮಾರ್, ಎಂಆರ್‌ಡಬ್ಲ್ಯೂ ಸೌಭಾಗ್ಯ ಸೇರಿದಂತೆ ತಾಲ್ಲೂಕು ಮಟ್ಟದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *