ಸಂವಿಧಾನದ ಆಶಯಗಳನ್ನು ಅರಿತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ: ಡಾ. ಬಾಲಗುರುಮೂರ್ತಿ

ಜಿಲ್ಲಾ ಸುದ್ದಿ ತಾಲ್ಲೂಕು ತುಮಕೂರು ನಗರ ಪ್ರಮುಖ ಸುದ್ದಿ

ಸಂವಿಧಾನದ ಆಶಯಗಳನ್ನು ಅರಿತು ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯ: ಡಾ. ಬಾಲಗುರುಮೂರ್ತಿ

Tumkurnews.in

ತುಮಕೂರು: ಸಂವಿಧಾನದ ಆಶಯಗಳನ್ನು ಅರಿತುಕೊಂಡು, ಅದರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ ಎಂದು ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಆಡಳಿತಾಧಿಕಾರಿ ಡಾ. ಬಾಲಗುರುಮೂರ್ತಿ ಹೇಳಿದರು.

ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 26ರಂದು ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತೀಯ ಸಂವಿಧಾನವು ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಗೂ ತನ್ನ ಪ್ರತಿನಿಧಿಯನ್ನು ಆಯ್ಕೆ ಮಾಡುವ ಹಕ್ಕಿದೆ. ವಿದ್ಯಾರ್ಥಿಗಳು ಸಂವಿಧಾನವನ್ನು ಕೇವಲ ಪಠ್ಯವಿಷಯವಾಗಿ ಪರಿಗಣಿಸದೆ, ಅದರ ಆಶಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಿದ ಅವರು, ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ಅಂಬೇಡ್ಕರ್ ಅವರು ವಹಿಸಿದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು. ರಾಷ್ಟ್ರೀಯ ಏಕತೆ, ಸಮಾನತೆ ಹಾಗೂ ಕಾನೂನಿನ ಅರಿವಿನ ಅಗತ್ಯವನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಎಂಡಿಎ ಪರೀಕ್ಷೆಯ ಮಹತ್ವ ಮತ್ತು ಜ್ಞಾನದ ಅಗತ್ಯದ ಕುರಿತು ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳ ಬಗ್ಗೆಯೂ ಮಾಹಿತಿ ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ವಿನಯ್ ಕುಮಾರ್ ಎಂ. ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮತ್ತು ನಾಗರಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ಸಂವಿಧಾನ ದಿನಾಚರಣೆಯ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಅರಿತುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆರಂಭದಲ್ಲಿ ಪ್ರೊ. ರಮೇಶ್ ಮಣ್ಣೆ ವಿ. ಅವರು ಗಣ್ಯರನ್ನು ಸ್ವಾಗತಿಸಿ, ಸಂವಿಧಾನದ ಪೀಠಿಕೆಯನ್ನು ಮಂಡಿಸಿದರು. ನಂತರ ವಿದ್ಯಾರ್ಥಿಗಳಿಂದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರಂಗಸ್ವಾಮಿ ಎಂ.ಆರ್. ಅವರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಾನು ಪ್ರಕಾಶ್, ಎಂ.ಕಾಂ. ವಿಭಾಗದ ಮುಖ್ಯಸ್ಥರು ಹಾಗೂ ಐಕ್ಯೂಎಸಿ ಸಂಚಾಲಕರಾದ ಸಯ್ಯದ್ ಬಾಬು ಸೇರಿದಂತೆ ಶ್ರೀ ಸಿದ್ಧಾರ್ಥ ಪದವಿ ಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜಿನ ವಿವಿಧ ವಿಭಾಗಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *