ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಾತ್ಮಕ ಮಟ್ಟದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಮಂಗಳವಾರ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
1997 ಬ್ಯಾಚ್‌ನ ಹಿರಿಯ ಐಎಎಸ್ ಅಧಿಕಾರಿ ಹರ್ಷ್ ಗುಪ್ತಾ ಅವರನ್ನು ಕರ್ನಾಟಕ ಅಪೀಲು ನ್ಯಾಯಮಂಡಳಿ (KAT) ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ತುಳಸಿ ಮದ್ದಿನೇನಿ ಅವರ ಹೆಚ್ಚುವರಿ ಹೊಣೆಗಾರಿಕೆಯನ್ನು ಸರ್ಕಾರ ಹಿಂಪಡೆದಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ನಾಗರಾಜ ಎನ್.ಎಂ. ಅವರನ್ನು ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವ ಸಂಸ್ಥೆಯ ಒಂಬುಡ್ಸ್‌ಮನ್ ಆಗಿ ವರ್ಗಾವಣೆ ಮಾಡಲಾಗಿದೆ.ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಭನ್ವರ್ ಸಿಂಗ್ ಮೀನಾ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಇದೇ ವೇಳೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದ ರಾಹುಲ್ ಶರಣಪ್ಪ ಸಂಕನೂರು ಅವರನ್ನು ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.
ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ವರ್ಗಾವಣೆ ಆದೇಶ ಹೊರಡಿಸಲಾಗಿದೆ.
