ತುಮಕೂರು: ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ

1 min read

ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವುದರಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚುತ್ತದೆ: ಡಿಸಿ ಶ್ರೀನಿವಾಸ್

Tumkurnews
ತುಮಕೂರು: ಯಾವುದೇ ಸ್ಪರ್ಧೆ, ಕಲೆ, ಕ್ರೀಡೆ ಸೇರಿದಂತೆ ಉತ್ತಮ ಚಟುವಟಿಕೆಗಳಲ್ಲಿ ಭಾಗವಹಿಸಲು ವೇದಿಕೆ ಕಲ್ಪಿಸಿದಾಗ ಮಕ್ಕಳಲ್ಲಿರುವ ಪ್ರತಿಭೆ ಬೆಳಕಿಗೆ ಬರುವುದಲ್ಲದೆ ಅವರ ಆತ್ಮಸ್ಥೈರ್ಯವೂ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಬಾಲಭವನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ನಗರದ ಬಾಲಭವನದಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ “ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯ, ಈ ಬಾರಿ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅಂಗನವಾಡಿ ಮಕ್ಕಳಿಗೆ ಅವಕಾಶ ಕಲ್ಪಿಸಿರುವುದು ವಿಶೇಷ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 3.19 ಲಕ್ಷ ಶಾಲಾ ವಿದ್ಯಾರ್ಥಿಗಳು ಹಾಗೂ 1.30ಲಕ್ಷ ಅಂಗನವಾಡಿ ಮಕ್ಕಳಿದ್ದು, ಮಕ್ಕಳ ಅಪೌಷ್ಠಿಕತೆಯನ್ನು ದೂರ ಮಾಡಲು ಹಾಗೂ ಆರೋಗ್ಯವಂತ ಮಗುವಿಗೆ ಜನ್ಮ ನೀಡಲೆಂದು ಸುಮಾರು 3000 ಗರ್ಭಿಣಿ, ಬಾಣಂತಿಯರಿಗೆ ಕೆಎಂಎಫ್ ವತಿಯಿಂದ ಪೌಷ್ಠಿಕ ಆಹಾರ ಕಿಟ್‍ಗಳನ್ನು ವಿತರಿಸಲಾಗುತ್ತಿದೆ. ಪೌಷ್ಠಿಕ ಆಹಾರ ಸೇವನೆಯಿಂದ ಹುಟ್ಟುವ ಮಕ್ಕಳು ಆರೋಗ್ಯವಂತರಾಗಿರುತ್ತಾರೆ. ಆರೋಗ್ಯವಂತ ಮಕ್ಕಳಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ತಾಯಂದಿರು ಪೌಷ್ಠಿಕ ಆಹಾರದ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ವಾರ್ತಾ ಇಲಾಖೆ: ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವೀಧರರಿಂದ ಅರ್ಜಿ ಆಹ್ವಾನ
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಮಾತನಾಡಿ, ಅಂಗನವಾಡಿ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ವೇದಿಕೆ ಕಲ್ಪಿಸಿರುವುದು ಮಕ್ಕಳ ಮೇಲೆ ಜಿಲ್ಲಾಧಿಕಾರಿಗಳಿಗಿರುವ ಪ್ರೇಮವನ್ನು ತಿಳಿಯಬಹುದು ಎಂದು ಹೇಳಿದರು.
ವೇಷಭೂಷಣ ಸ್ಪರ್ಧೆಯಲ್ಲಿ ಭಾಗವಹಿಸಲು ಬಂದಿದ್ದ ಒನಕೆ ಓಬವ್ವ, ಭಗವಾನ್ ಶ್ರೀ ಕೃಷ್ಣ, ಕಿತ್ತೂರು ರಾಣಿ ಚೆನ್ನಮ್ಮ, ಚಾಚಾ ನೆಹರು, ನೇಗಿಲು ಹೊತ್ತ ರೈತ, ದೇಶ ಕಾಯುವ ವೀರ ಯೋಧ ಸೇರಿದಂತೆ ವಿವಿಧ ವೇಷಧಾರಿ ಮಕ್ಕಳನ್ನು ಕಣ್ತುಂಬಿಕೊಂಡ ಅವರು, ಮಕ್ಕಳು ದೇಶಕ್ಕಾಗಿ ಶ್ರಮಿಸಿದ ಮಹನೀಯರು, ವೀರ ಮಹಿಳೆಯರ ವೇಷ ಧರಿಸುವುದಲ್ಲದೆ, ಅವರಲ್ಲಿರುವ ತತ್ವಾದರ್ಶಗಳನ್ನೂ ಸಹ ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಪೋಷಕರು ತಮ್ಮ ಮಕ್ಕಳಿಗೆ ಮಾದರಿಯಾಗಿರಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸನ್ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಬೇಕು. ಮುಂದೊಂದು ದಿನ ತಮ್ಮ ಮಕ್ಕಳು ಇತಿಹಾಸ ನಿರ್ಮಾಣ ಮಾಡುವಂತೆ ಬೆಳೆಸಬೇಕೆಂದು ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ ಮಾತನಾಡಿ, ಇಂತಹ ಕಾರ್ಯಕ್ರಮಗಳಿಂದ ಬಾಲ ಪ್ರತಿಭೆಗಳು ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಮಕ್ಕಳನ್ನು ವಿವಿಧ ವೇಷಗಳಲ್ಲಿ ಅಣಿ ಮಾಡಿರುವ ಪೋಷಕರ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗ: ಮಹಿಳೆಯರಿಂದ ಅರ್ಜಿ ಆಹ್ವಾನ
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ ಮಾತನಾಡಿ, ಮಕ್ಕಳಿಗೆ ಶುಭಕೋರಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು 9 ರಿಂದ 16 ವರ್ಷದ ಮಕ್ಕಳಿಗಾಗಿ ಸೃಜನಶೀಲ ಕಲೆಗಳಾದ ಶಾಸ್ತ್ರೀಯ ಸಂಗೀತ, ಜನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗುಮ ಸಂಗೀತ; ವಾದ್ಯ ಸಂಗೀತದಲ್ಲಿ ಮೃದಂಗ, ಕೀಬೋರ್ಡ್, ನಗಾರಿ, ಕೊಳಲು, ಡೊಳ್ಳು, ತಬಲಾ; ವಿಜ್ಞಾನದಲ್ಲಿ ಅವಿಷ್ಕಾರ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ವಿವಿಧ ಶಾಲಾ ವಿದ್ಯಾರ್ಥಿಗಳು, ಅಂಗನವಾಡಿ ಮಕ್ಕಳು, ತಾಯಂದಿರು ಸೇರಿದಂತೆ ಮತ್ತಿತರರು ಹಾಜರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ವಂದಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 200 ಮಕ್ಕಳು ವಿವಿಧ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.

You May Also Like

More From Author

+ There are no comments

Add yours