ಮಾಸ್ಕ್ ಧರಿಸದಿದ್ದರೆ ದಂಡ: ಜಿಲ್ಲಾಧಿಕಾರಿ ಎಚ್ಚರಿಕೆ

1 min read

 

 

 

 

 

ತುಮಕೂರು ನ್ಯೂಸ್.ಇನ್(ಜೂ.18):

ಸಾರ್ವಜನಿಕ ಸ್ಥಳಗಳಲ್ಲಿ ಯಾರು ಮಾಸ್ಕ್ ಧರಿಸುವುದಿಲ್ಲವೋ ಅವರಿಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಘ, ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಂದು ಹಮ್ಮಿಕೊಂಡಿದ್ದ ಮಾಸ್ಕ್‍ದಿನದ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾಸ್ಕ್ ಧರಿಸದೇ ಓಡಾಡುವವರಿಗೆ ಪಂಚಾಯಿತಿ ಬಿಲ್ ಕಲೆಕ್ಟರ್‍ನಿಂದ ಕಾರ್ಪೋರೇಷನ್ ಕಮೀಷನರ್ ಕಚೇರಿಯ ಬಿಲ್ ಕಲೆಕ್ಟರ್‍ವರೆಗೂ ಹಾಗೂ ಪೊಲೀಸರಿಗೆ ದಂಡ ವಿಧಿಸುವ ಅಧಿಕಾರವನ್ನು ಸರ್ಕಾರ ನೀಡಿದೆ. ದಂಡ ವಿಧಿಸುವ ಮುನ್ನ ಜಾಥಾ ಮಾಡುವ ಮುಖಾಂತರ ಜನರಿಗೆ ಕೋವಿಡ್ 19 ನಿಯಂತ್ರಣದ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ ಎಂದರು.
ಕೋವಿಡ್ 19 ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದರಿಂದ ಬಹುತೇಕ ಕಡಿಮೆ ಮಾಡಬಹುದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಆದೇಶದಂತೆ ಇಂದು ರಾಜ್ಯಾದ್ಯಂತ ಮಾಸ್ಕ್ ದಿನ ಆಚರಣೆ ಮಾಡುತ್ತಿದ್ದಾರೆ. ಅದರಂತೆ ನಮ್ಮ ಜಿಲ್ಲೆಯಲ್ಲಿಯೂ ಸಹ ಹೆಚ್ಚಿಗೆ ಜನ ಸೇರದೆ ಸಾಮಾಜಿಕ ಅಂತರ ಕಾಪಾಡಿಕೊಂಡು ಇಂದು ಮಾಸ್ಕ್‍ದಿನ ಆಚರಣೆಯನ್ನು ಜಾಥಾದ ಮೂಲಕ ಮಾಡುತ್ತಿದ್ದು, ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್‍ನ್ನು ಧರಿಸಬೇಕು ಎಂದು ಅವರು ತಿಳಿಸಿದರು.
ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಅವರು ಮಾತನಾಡಿ, ಸರ್ಕಾರ ಮೊದಲಿನಿಂದಲೂ ಸಾರ್ವಜನಿಕರಿಗೆ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಿಕೊಂಡು ಬರುತ್ತಿದೆ. ಕೋವಿಡ್ 19 ತಡೆಯುವ ನಿಟ್ಟಿನಲ್ಲಿ ಇಂದು ಮಾಸ್ಕ್ ದಿನಾಚರಣೆ ಆಚರಿಸುವ ಜೊತೆಗೆ ಜಾಥಾದ ಮೂಲಕ ಸಾರ್ವಜನಿಕ ಪ್ರದೇಶಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾಸ್ಕ್ ಧರಿಸುವುದರಿಂದ ಹೆಚ್ಚಿನ ಮಟ್ಟಿಗೆ ಕೋವಿಡ್ 19 ತಡೆಯಬಹುದು ಎಂಬ ವಿಚಾರ ಎಲ್ಲರಿಗೂ ತಿಳಿದಿದ್ದರೂ ಜನರು ಮಾಸ್ಕ್ ಹಾಕಿಕೊಂಡು ಸಂಚರಿಸುವುದರಲ್ಲಿ ಆಸಕ್ತಿ ತೋರುತ್ತಿಲ್ಲ, ಈ ಹಿನ್ನೆಲೆಯಲ್ಲಿ ಸರ್ಕಾರದ ವತಿಂಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಚೇರ್‍ಮನ್ ನಾಗಣ್ಣ, ಉಪವಿಭಾಗಾಧಿಕಾರಿ ಅಜಯ್, ತಹಶೀಲ್ದಾರ್ ಮೋಹನ್‍ಕುಮಾರ್ ಸೇರಿದಂತೆ ವೈದ್ಯರು, ಆಶಾಕಾರ್ಯಕರ್ತರು ಇದ್ದರು..

You May Also Like

More From Author

+ There are no comments

Add yours